LATEST NEWS
ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ – ಎಐಎಡಿಎಂಕೆ ಮೈತ್ರಿಗೆ ಮೊದಲ ವಿಕೆಟ್ ಪತನ

ಚೆನ್ನೈ ಎಪ್ರಿಲ್ 04: ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಪೂರ್ವಭಾವಿಯಾಗಿ ಎಐಎಡಿಎಂಕೆ ಜೊತೆ ಮೈತ್ರಿಗೆ ಮುಂದಾಗಿರುವ ಬಿಜೆಪಿ ಅದರ ಮೊದಲ ಹೆಜ್ಜೆಯಾಗಿ ಅಣ್ಣಾಮಲೈ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹೊರಟಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಬದಲಾಯಿಸಬಹುದೆಂಬ ಊಹಾಪೋಹಗಳಿಗೆ ಅಣ್ಣಾಮಲೈ ಸ್ವತಃ ಸ್ಪಷ್ಟನೆ ನೀಡಿದ್ದು, ಪಕ್ಷದ ಮುಂದಿನ ರಾಜ್ಯ ಅಧ್ಯಕ್ಷರಾಗುವ ರೇಸ್‌ನಲ್ಲಿ ತಾವು ಇಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ತಾವು ಕೆಳಗಿಳಿಯುತ್ತಿರುವುದಾಗಿ ಘೋಷಿಸಿದ್ದಾರೆ.

ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಅಣ್ಣಾಮಲೈ ಅಧ್ಯಕ್ಷ ಸ್ಥಾನದಿಂದ ತೆಗೆಯಬೇಕೆಂಬ ಷರತ್ತನ್ನು ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಇದೀಗ ಬಹುತೇಕ ಅಣ್ಣಾಮಲೈ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಕೊಯಮತ್ತೂರಿನಲ್ಲಿ ಮಾತನಾಡಿದ ಅಣ್ಣಾಮಲೈ, ಬಿಜೆಪಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಹೇಳಿದ್ದಾರೆ. ಮುಂದಿನ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ಅಣ್ಣಾಮಲೈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದ್ದು, ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಎಂದು ಅಣ್ಣಾಮಲೈ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಎಐಎಡಿಎಂಕೆ ನಾಯಕರ ಬಗ್ಗೆ ಅಣ್ಣಾಮಲೈ ಅವರ ಟೀಕೆ 2023 ರಲ್ಲಿ ಬಿಜೆಪಿ ಜೊತೆಗಿನ ಸಂಬಂಧವನ್ನು ಪಕ್ಷ ಮುರಿದುಕೊಳ್ಳಲು ಪ್ರಮುಖ ಕಾರಣವೆಂದು ಪರಿಗಣಿಸಲಾಗಿದೆ.
1 Comment