LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಮನೆಯಲ್ಲೆ ಹಬ್ಬಗಳ ಆಚರಣೆ

ಮಂಗಳೂರು ಜುಲೈ 20: ಕೊರೊನಾದಿಂದಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಬಹುತೇಕ ಹಬ್ಬಗಳ ಸಂದರ್ಭ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಜುಲೈ 25ರ ಶನಿವಾರ ನಾಗರ ಪಂಚಮಿ ಹಬ್ಬವಾಗಿದ್ದು ಈ ದಿನದಂದು ಜಿಲ್ಲೆಯ ಎಲ್ಲಾ ಪ್ರಮುಖ ನಾಗಾರಾಧನಾ ಸ್ಥಳಗಳಲ್ಲಿ ಸಾರ್ವಜನಿಕ ನಾಗಾರಾಧನೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು. ಜಿಲ್ಲೆಯಲ್ಲಿ ಕೊರೊನಾ ಸೊಂಕು ಸಂಪೂರ್ಣ ಹತೋಟಿಗೆ ಬಾರದ ಹಿನ್ನಲೆ ಸಾರ್ವಜನಿಕರ ಪಾಲ್ಗೊಂಡು ಧಾರ್ಮಿಕ ಆಚರಣೆ ಮತ್ತು ಕಾರ್ಯಕ್ರಮಗಳನ್ನು ಆಚರಿಸಲು ಅವಕಾಶ ನೀಡಿದಲ್ಲಿ, ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಒಂದೆಡೆ ಸೇರಿ ಸೋಂಕು ಹರಡುವಿಕೆ ಹೆಚ್ಚುವ ಸಂಭವವಿದೆ.

ಹಾಗಾಗಿ, ಮುಂಜಾಗ್ರತಾ ಕ್ರಮವಾಗಿ ಮುಂಬರುವ ನಾಗರ ಪಂಚಮಿ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ವರ ಮಹಾಲಕ್ಷ್ಮೀ ಹಬ್ಬ ಸೇರಿದಂತೆ ಎಲ್ಲಾ ಪ್ರಮುಖ ಹಬ್ಬಗಳ ಸಂದರ್ಭಗಳಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ತಮ್ಮ ತಮ್ಮ ಮನೆಗಳಿಗೆ ಸೀಮಿತಗೊಳಿಸಿ ಹಬ್ಬಗಳನ್ನು ಆಚರಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.