ಶಬರಿಮಲೆ ಸೆಪ್ಟೆಂಬರ್ 10: ಶಬರಿಮಲೆ ಅಯ್ಯಪ್ಪನ ಸನ್ನಿಧಿಗೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರೀಂಕೋರ್ಟ್ ಗೆ ಯಾವುದೇ ಹೊಸ ಪ್ರಮಾಣ ಪತ್ರ ಸಲ್ಲಿಸಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯು (ಟಿಡಿಬಿ) ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮುಟ್ಟಿನ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಹೊಸ ಪ್ರಮಾಣಪತ್ರ ಸಲ್ಲಿಸುವ ಯಾವುದೇ ಅಗತ್ಯ ಈಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಶಬರಿಮಲೆ ದೇವಸ್ಥಾನದಲ್ಲಿ ಎಲ್ಲಾ ರೀತಿಯ ಆಚರಣೆ ಹಾಗೂ ಪದ್ಧತಿಗಳನ್ನು ಯಾವುದೇ ಬದಲಾವಣೆ ಇಲ್ಲದೆ ಅಚ್ಚುಕಟ್ಟಾಗಿ ನಡೆಸಿಕೊಂಡು ಬರಲಾಗುತ್ತಿದೆ. ಈ ಪ್ರಕರಣವು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಮುಂದಿದೆ. ಮಹಿಳೆಯರ ಪ್ರವೇಶದ ವಿಷಯದಲ್ಲಿ ದೇವಸ್ಥಾನವು ತನ್ನ ಪದ್ಧತಿಗಳ ರಕ್ಷಣೆಗೆ ಬದ್ಧವಾಗಿದೆ ಎಂದು ಹೇಳಲಾಗಿದೆ’ ಎಂದಿದ್ದಾರೆ.
ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಎಲ್ಲವೂ ಉತ್ತಮವಾಗಿ ನಡೆಯುತ್ತಿದೆ. ಕಳೆದ ವಾರ್ಷಿಕ ಯಾತ್ರೆಯ ಸಂದರ್ಭದಲ್ಲಿ 54 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ. ಸರ್ಕಾರ, ಟಿಡಿಬಿ, ಪಂದಲಮ್ ರಾಜ ಮನೆತನ, ಜನಪ್ರತಿನಿಧಿಗಳು ಮತ್ತು ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಕಳೆದ ಋತುವಿನಲ್ಲಿ ಯಾವುದೇ ದೂರುಗಳು ದಾಖಲಾಗಿಲ್ಲ. ಆಯೋಜನೆಗೊಂಡಿರುವ ಜಾಗತಿಕ ಅಯ್ಯಪ್ಪ ಸಂಗಮಮ್ ಕೂಡಾ ಯಾವುದೇ ಸಮಸ್ಯೆ ಇಲ್ಲದೆ ಪೂರ್ಣಗೊಳಿಸುವುದು ನಮ್ಮ ಯೋಜನೆಯಾಗಿದೆ’ ಎಂದು ಪ್ರಶಾಂತ್ ತಿಳಿಸಿದ್ದಾರೆ.



