LATEST NEWS
ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪ ಮಾಜಿ ಸಚಿವ ರಮಾನಾಥ ರೈ ಚುನಾವಣೆ ಸ್ಪರ್ಧೆಗೆ ಅಡ್ಡಿ ಇಲ್ಲ – ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪ ಮಾಜಿ ಸಚಿವ ರಮಾನಾಥ ರೈ ಚುನಾವಣೆ ಸ್ಪರ್ಧೆಗೆ ಅಡ್ಡಿ ಇಲ್ಲ – ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ಮಂಗಳೂರು ಮಾರ್ಚ್ 11: ಮಾಜಿ ಸಚಿವ ರಮಾನಾಥ ರೈ ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪವಿದ್ದರೂ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಯಾವುದೇ ಅಡ್ಡಿಯಾಗುವುದಿಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಹಂಚುವ ಉದ್ದೇಶದಿಂದ 62 ಲಕ್ಷ ನಗದನ್ನು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪದ ಮೇಲೆ ಮಾಜಿ ಸಚಿವ ಬಿ.ರಮಾನಾಥ ರೈ ಸೇರಿದಂತೆ ಆರು ಮಂದಿ ವಿರುದ್ಧ ಇತ್ತೀಚೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

‘ಆದಾಯ ತೆರಿಗೆ ಅಧಿಕಾರಿಗಳು ಚುನಾವಣೆ ಸಂದರ್ಭದಲ್ಲಿ ವಶಪಡಿಸಿಕೊಂಡ ನಗದಿಗೆ ಸಂಬಂಧಿಸಿದಂತೆ ವರದಿ ನೀಡಿದ್ದರು. ಅದರ ಆಧಾರದಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಲಾಗಿದೆ. ಈ ಹಂತದಲ್ಲಿ ಅವರು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಪ್ರಕರಣ ಅಡ್ಡಿಯಾಗುವುದಿಲ್ಲ’ ಎಂದರು
ರಮಾನಾಥ ರೈ ಅವರು ಚುನಾವಣೆಗೆ ಸ್ಪರ್ಧಿಸಿದರೆ ನಾಮಪತ್ರದ ಜೊತೆಗಿನ ಪ್ರಮಾಣಪತ್ರದಲ್ಲಿ ಈ ಪ್ರಕರಣದ ಬಗ್ಗೆಯೂ ಮಾಹಿತಿ ನೀಡಬೇಕಾಗುತ್ತದೆ. ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದೆ. ವಿಚಾರಣೆ ಮುಗಿದು ಅಪರಾಧ ಸಾಬೀತಾದರೆ ಮಾತ್ರವೇ ಚುನಾವಣೆಗೆ ಸ್ಪರ್ಧಿಸಲು ಅಡ್ಡಿಯಾಗಬಹುದು ಎಂದು ತಿಳಿಸಿದರು.