LATEST NEWS
ಸಾರ್ವಜನಿಕ ಗಣೇಶೋತ್ಸವ ಆಚರಿಸಿದರೆ ಕಠಿಣ ಕ್ರಮ
ಮಂಗಳೂರು ಅಗಸ್ಟ್ 16:ಕೊರೊನಾ ಹಿನ್ನಲೆ ಈಗಾಗಲೇ ರಾಜ್ಯ ಸರಕಾರ ಸಾರ್ವಜನಿಕ ಗಣೇಶೋತ್ಸವ ನಡೆಸದಂತೆ ಆದೇಶ ಹೊರಡಿಸಿದ್ದು, ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯಿಂದ ಆದೇಶ ಬಿಡುಗಡೆ ಮಾಡಿದ್ದು ಈ ವರ್ಷ ಕೊರೊನಾ ಕಾರಣದಿಂದಾಗಿ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದ ಒಳಗೆ ಅಥವಾ ತಮ್ಮ ಮನೆಯಲ್ಲಿಯೇ ಆಚರಿಸಬೇಕು ಎಂದು ತಿಳಿಸಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡಲು ಅವಕಾಶವಿಲ್ಲ. ಹಾಗೆಯೇ ಸಾರ್ವಜನಿಕ ನದಿ, ಕೆರೆ, ಬಾವಿ, ಕೊಳ ಹಾಗೂ ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ. ಇನ್ನು ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮಾಡುವಂತಿಲ್ಲ. ಹಾಗೆಯೇ ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.
ಯಾವುದೇ ಮಾರ್ಗಸೂಚಿಯ ಉಲ್ಲಂಘನೆಯಾದಲ್ಲಿ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.