KARNATAKA
CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು

ಶಿವಮೊಗ್ಗ, ಏಪ್ರಿಲ್ 18: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ.
ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಗೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯಿತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ.

ಈ ರೀತಿ ಗಾಯತ್ರಿ ದೀಕ್ಷೆ ಪಡೆದು ಆತ್ಮಸಾಕ್ಷತ್ಕಾರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಅಧಿಕಾರಿಗಳು ತೆಗೆಸಿದ್ದು ಅವಮಾನಕಾರಿಯಾಗಿದೆ. ಈ ಘಟನೆ ಖಂಡನೀಯವಾಗಿದೆ ಎಂದು ಬ್ರಾಹ್ಮಣ ಸಂಘಗಳ ಒಕ್ಕೂಟ ದೂರು ನೀಡಿದೆ.
ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದ್ದು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಕೂಡಲೇ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯಿತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ, ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋಧಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
2 Comments