KARNATAKA
ಭಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ – ಓರ್ವ ಪೊಲೀಸ್ ವಶಕ್ಕೆ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಈ ಘಟನೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇನ್ನು ಪ್ರಕರಣದ ಬೆನ್ನತ್ತಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಈತನ ಬಂಧನ ಮೂಲಕ ಕೊಲೆ ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆ, ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ, ಕೊಲೆಗೂ ಹಿಜಾಬ್ ವಿವಾದಕ್ಕೂ ಏನಾದರೂ ಸಂಬಂಧ ಇದೆಯೇ ಹೀಗೆ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ.