KARNATAKA
ಕಾರವಾರ – ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜಾನಪದ ಕೋಗಿಲೆ ಸುಕ್ರಜ್ಜಿ ಇನ್ನಿಲ್ಲ
ಕಾರವಾರ ಫೆಬ್ರವರಿ 13: ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಸುಕ್ರಜ್ಜಿ ಎಂದೇ ಖ್ಯಾತರಾಗಿದ್ದ ಅವರು ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಮೂಲಕ ಚಿರಪರಿಚಿತರಾಗಿದ್ದರು. ಬಡಗೇರಿ ಗ್ರಾಮದಲ್ಲಿ ಮದ್ಯ ಮಾರಾಟ ಹಾವಳಿ ಹೆಚ್ಚಿದ್ದರಿಂದ ಅದನ್ನು ತಡೆಯಲು ಹಲವು ದಶಕಗಳ ಹಿಂದೆ ಜನಾಂದೋಲನ ನಡೆಸಿದ್ದರು. 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.
ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಮರಳಿದ್ದ ಅವರು ಚೇತರಿಸಿಕೊಂಡಿದ್ದರು. ರಾತ್ರಿವರೆಗೆ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿದ್ದರು. ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.