LATEST NEWS
ಪರುಶುರಾಮನಿಗೆ ವಂಚನೆ – ಪರುಶುರಾಮನ ಮೂರ್ತಿ ಕಂಚಿನದಲ್ಲ ಅದು ಹಿತ್ತಾಳೆಯದ್ದು…!!

ಉಡುಪಿ ಜುಲೈ 15: ಕಾರ್ಕಳದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ಕಂಚಿನದಲ್ಲ ಅದು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಇದೀಗ ತಿಳಿದು ಬಂದಿದ್ದು, ಪೊಲೀಸರು ತನಿಖೆ ಪೂರ್ಣಗೊಳಿಸಿ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಕಾರ್ಕಳದ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಿಸಲಾಗಿರುವ ಪರಶುರಾಮ ಥೀಂ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿಯಲ್ಲಿ ಪರಶುರಾಮ ಪ್ರತಿಮೆಯನ್ನು “ಹಿತ್ತಾಳೆ”ಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಶಿಲ್ಪಿ ಕೃಷ್ಣನಾಯ್ಕ ಅವರು ಕಂಚಿನಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ನಿರ್ಮಿಸಿರುವುದು ತಜ್ಞರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಬೀತಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ. ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ ಕುಮಾರ್ ಹಾಗೂ ಎಂಜಿನಿಯರ್ ಸಚಿನ್ ವೈ. ಕುಮಾರ್ ಅವರು ಒಳಸಂಚು, ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿದ್ದಾರೆ ಎಂದೂ ಉಲ್ಲೇಖಿಸಲಾಗಿದೆ.
ಅರುಣ ಕುಮಾರ್ ಹಾಗೂ ಸಚಿನ್ ವೈ. ಕುಮಾರ್ ಅವರು ಕಾರ್ಯಾದೇಶದ ಷರತ್ತುಗಳನ್ನು ಪಾಲಿಸಿಲ್ಲ. 2023ರ ಅಕ್ಟೋಬರ್ 12 ರಂದು ಮೂರ್ತಿಯ ಸೊಂಟದಿಂದ ಮೇಲ್ಬಾಗವನ್ನು ಉಮಿಕಲ್ ಬೆಟ್ಟದಿಂದ ಒಯ್ದು ಉಡುಪಿ ತಾಲ್ಲೂಕಿನ ಅಲೆವೂರು ಗ್ರಾಮದ ಪ್ರಗತಿ ನಗರದ ನಿರ್ಮಿತಿ ಕೇಂದ್ರದ ಶೆಡ್‌ನಲ್ಲಿ 2024ರ ಫೆಬ್ರುವರಿ 25ರ ವರೆಗೆ ಇರಿಸಿಕೊಂಡಿದ್ದಾರೆ. ಮೂರ್ತಿಯ ಸೊಂಟದಿಂದ ಮೇಲ್ಬಾಗವನ್ನು ಶಿಲ್ಪಿ ಕೃಷ್ಣ ನಾಯ್ಕ ಅವರಿಗೆ ಹಸ್ತಾಂತರ ಮಾಡಿದ್ದು, ಕೃಷ್ಣ ನಾಯ್ಕ ಅವರು ಅದನ್ನು ಬೆಂಗಳೂರಿಗೆ ಸಾಗಾಟ ಮಾಡಿರುವುದಾಗಿ ತಪ್ಪು ಮಾಹಿತಿಯನ್ನು ನೀಡಿದ್ದಾರೆ ಎಂದೂ ಹೇಳಲಾಗಿದೆ.
2023ರ ಜನವರಿ 27 ರಂದು ಪರಶುರಾಮ ಥೀಂ ಪಾರ್ಕ್ ಅನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದ್ದರು. ನಂತರದ ದಿನಗಳಲ್ಲಿ ಅಲ್ಲಿ ಸ್ಥಾಪಿಸಲಾಗಿದ್ದ ಪರಶುರಾಮ ಮೂರ್ತಿಯನ್ನು ಫೈಬರ್ನಿಂದ ನಿರ್ಮಿಸಲಾಗಿದೆ ಹೊರತು ಕಂಚಿನ ಪ್ರತಿಮೆ ಅಲ್ಲ ಎಂದು ಕಾಂಗ್ರೆಸ್ ನಾಯಕರು ಮತ್ತು ಸ್ಥಳೀಯರು ಆರೋಪ ಮಾಡಿದ್ದರು.
ಈ ಸಂಬಂಧ 2024 ರ ಜೂನ್ 21 ಕೃಷ್ಣ ಶೆಟ್ಟಿ ಎಂಬುವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ “ಕ್ರಿಶ್ ಆರ್ಟ್ ವರ್ಲ್ಡ್ ಸಂಸ್ಥೆಯು ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದಿತ್ತು. ಆದರೆ, ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಮೂರ್ತಿ ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.