LATEST NEWS
ಪೌರಕಾರ್ಮಿಕರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ
ಉಡುಪಿ, ಡಿಸೆಂಬರ್ 30 : ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ, ಅವರಿಗೆ ಸರ್ಕಾರದ ವಿವಿಧ ಯೋಜನೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ
ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮತ್ತು ಅವರು ಕುಟುಂಬದವರಿಗೆ ವಿವಿಧ ಇಲಾಖೆಗಳಲ್ಲಿ ಹಲವು ಸೌಲಭ್ಯಗಳಿದ್ದು, ಈ ಬಗ್ಗೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾಹಿತಿ ಪಡೆದು ಅವರಿಗೆ ತಿಳಿಸಿ, ಯೋಜನೆಯ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಬೇಕು ಎಂದರು.
ಕೋವಿಡ್ ಮುನ್ನೆಚ್ಚರಿಕೆಯಾಗಿ ಎಲ್ಲಾ ಪೌರಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಎಲ್ಲಾ ಮುನ್ನೆಚ್ಚರಿಕಾ ಸಾಮಾಗ್ರಿಗಳನ್ನು ಹಾಗೂ ದೈನಂದಿನ ಕಾರ್ಯ ನಿರ್ವಹಿಸಲು ಅಗತ್ಯವಿರುವ ಸುರಕ್ಷತಾ ಉಪಕರಣಗಳನ್ನು ನೀಡುವಂತೆ ಮತ್ತು ಅವರ ಸಮಗ್ರ ಆರೋಗ್ಯ ತಪಾಸಣೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಲಭ್ಯವಿಲ್ಲದಿದ್ದಲ್ಲಿ ಖಾಸಗಿ ವ್ಯವಸ್ಥೆಯಿಂದ ಆದರೂ ಲಸಿಕೆ ಖರೀದಿಸಿ ಅವರಿಗೆ ಆದ್ಯತೆಯಲ್ಲಿ ಬೂಸ್ಟರ್ ಲಸಿಕೆ ನೀಡುವಂತೆ ಸೂಚನೆ ನೀಡಿದರು. ಪೌರ ಕಾಮಿಕರ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರವೇಶಕ್ಕೆ ಅವಕಾಶವಿದ್ದು, ಈ ಬಗ್ಗೆ ಅವರಿಗೆ ಮಾಹಿತಿ ನೀಡುವಂತೆ ತಿಳಿಸಿದರು.