ಅಷ್ಟ ಮಠದ ಹಿರಿಯ ಯತಿ ಪೇಜಾವರ ಶ್ರೀ ಇನ್ನಿಲ್ಲ

ಉಡುಪಿ ಡಿಸೆಂಬರ್ 29: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮಿಜಿ ಇಂದು ಕೊನೆಯುಸಿರೆಳೆದರು.

ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಪೇಜಾವರ ಶ್ರೀಗಳು , ನಿನ್ನೆಯಿಂದ ಶ್ರೀಗಳ ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು. ಮಣಿಪಾಲ ಆಸ್ಪತ್ರೆಯ ವೈದ್ಯರ ಸತತ ಪ್ರಯತ್ನದ ನಂತರವೂ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಶ್ರೀಗಳನ್ನು ಪೇಜಾವರ ಮಠಕ್ಕೆ ಸ್ಥಳಾಂತರಿಸಲಾಗಿತ್ತು.

ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣೈಕ್ಯರಾದರು.