ಉಡುಪಿ, ಅಕ್ಟೋಬರ್ 29: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 28 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಶುಕ್ರವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ಅವರು ದೇವರ ದರ್ಶನ ಪಡೆದು, ಪೂಜ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಬಳಿಕ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಭಕ್ತರು ಮತ್ತು ಗಣ್ಯರು ಬೃಹತ್ ಪ್ರಮಾಣದಲ್ಲಿ ಸೇರುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಅವರ ಭೇಟೆಯನ್ನು ಪ್ರಧಾನಿ ಕಚೇರ ದೃಢಪಡಿಸಿದೆ. ಹೀಗಾಗಿ ಸದ್ಯ ಅಗತ್ಯ ಎಲ್ಲಾ ವ್ಯವಸ್ಥೆಗಳನ್ನು ಈಗಾಗಲೇ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.
ನವೆಂಬರ್ 8ರಿಂದ 30ರವರೆಗೆ ಉಡುಪಿಯ ಶ್ರೀಕೃಷ್ಣ ಮಠ ಮತ್ತು ಪುತ್ತಿಗೆ ಮಠದ ಆಶ್ರಯದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ನಡೆಯಲಿದೆ. ಕೊನೆಯ ದಿನ ಅಂದರೆ ನ.30ರಂದು ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಸೇರಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ಕಾರ್ಯಕ್ರಮದಲ್ಲಿ ದೇಶದ ಗಣ್ಯರು ಸೇರಿದಂತೆ ಸಂತರು, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ.