ಮಂಗಳೂರು ಡಿಸೆಂಬರ್ 09: ಡ್ರಗ್ಸ್ ಮಾರಾಟ ಮಾಡುವ ಪೆಡ್ಲರ್ ಗಳಿಗೆ ನ್ಯಾಯಾಲಯದಲ್ಲಿ ಕಠಿಣ ಶಿಕ್ಷೆ ಕೊಡಿಸಿದ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ನಗರ ಪೊಲೀಸ್ ಆಯುಕ್ತರ ಕಚೇರಿ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.


ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಮಿಥುನ್ , ಸೆನ್ ಪೊಲೀಸ್ ಠಾಣೆ ಎಸಿಪಿ ರವೀಶ್ ನಾಯಕ್, ಉಪಸ್ಥಿತರಿದ್ದರು.

2022, ಜೂನ್ 14ರಂದು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದರು.
ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಡಿ.6ರಂದು ಸುಡಾನ್ ದೇಶದ ಓರ್ವ ಪ್ರಜೆ ಸಹಿತ 5 ಆರೋಪಿಗಳಿಗೆ 12 ರಿಂದ 14 ವರ್ಷದ ತನಕ ಕಠಿಣ ಸಜೆ ಮತ್ತು ದಂಡ ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿತ್ತು.

Share Information