ತುಮಕೂರು, ಮಾರ್ಚ್ 20: ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಲ್ಲಿ ಸಾವನಪ್ಪಿದ ಘಟನೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸಂಭವಿಸಿದೆ. ಮೃತರನ್ನು ಕಾಂತರಾಜು (45) ಎಂದು ಗುರುತಿಸಲಾಗಿದೆ.

ಇಸ್ಪೀಟ್ ಆಟದಲ್ಲಿ ತೊಡಗಿದ್ದ ಆರು ಮಂದಿಯನ್ನು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಕಾಂತರಾಜು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಹುಳಿಯಾರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು. ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಠಾಣೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಗಂಭೀರ ಆರೋಪ ಮಾಡಿದರು. ನಂತರ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರು, ಘಟನೆಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಭರವಸೆಯ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದು, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣದ ಕುರಿತಾಗಿ ಹೆಚ್ಚಿನ ತನಿಖೆ ಮುಂದುವರಿದಿದೆ.