ನವದೆಹಲಿ, ಜುಲೈ 23: ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ದಿಢೀರ್ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತ ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದ ಪ್ರತಿಭಟನೆ (Protest) ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ರಾತ್ರಿ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರು ‘ಸಂಸದ್ ಚಲೋ’ ಕರೆಯನ್ನು ನೀಡಿ ಬ್ಯಾರಿಕೇಡ್ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು(Police) ಮತ್ತು ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗ ಮಾಡಿದ್ದಾರೆ.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕೇಂದ್ರ ದೆಹಲಿ ಹಾಗೂ ಜಂತರ್ ಮಂತರ್ ಸುತ್ತಮುತ್ತ ಜ್ಯಾಮರ್ಗಳನ್ನು ಅಳವಡಿಸಿ ಇಂಟರ್ನೆಟ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸತತ ಮೂರನೇ ದಿನವೂ ತೀವ್ರಗೊಂಡಿದ್ದು, ಸ್ಥಳದಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಕಿಡಿಗೇಡಿಗಳ ಗುಂಪೊಂದು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ಹಾಗೂ ಬಾಟಲಿಗಳಿಂದ ದಾಳಿ ನಡೆಸಿದೆ. ಈ ಹಠಾತ್ ದಾಳಿಯಲ್ಲಿ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.