ಪುತ್ತೂರು ಮಾರ್ಚ್ 12: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ರಾಜಕೀಯ ಸಮಾವೇಶಕ್ಕೆ ಅವಕಾಶ ನೀಡಿರುವುದು ಈಗ ಭಾರಿ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಮಹಿಳಾ ಸಂಭ್ರಮ ಕಾರ್ಯಕ್ರಮಕ್ಕೆ ದೇವಸ್ಥಾನದ ಆವರಣದಲ್ಲಿ ಅವಕಾಶ ನೀಡಿದ್ದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿಗಳ ಪ್ರಕಾರ, ದೇವಸ್ಥಾನದ ಆವರಣ ಅಥವಾ ಸಭಾಂಗಣಗಳಲ್ಲಿ ರಾಜಕೀಯ ಸಭೆ-ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ. ಆದರೆ, ಮಾರ್ಚ್ 8ರಂದು ನಡೆದ ಸಮಾವೇಶದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿದು ಮೂರು ದಿನ ಕಳೆದರೂ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಬ್ಯಾನರ್ಗಳು ಹಾಗೆಯೇ ಇರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ನಿಯಮಬಾಹಿರ ಕಾರ್ಯಕ್ರಮಕ್ಕೆ ಅವಕಾಶ ನೀಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಈಗಾಗಲೇ ಪುತ್ತೂರು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಿದೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, “ಅವಕಾಶ ಕೋರುವಾಗ ಕೇವಲ ‘ಮಹಿಳಾ ಸಮಾವೇಶ’ ಎಂದು ತಿಳಿಸಲಾಗಿತ್ತು. ಹೀಗಾಗಿ ಅನುಮತಿ ನೀಡಲಾಗಿತ್ತು. ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಸರು ಕಂಡ ತಕ್ಷಣ ನಾನು ಹೊರಬಂದಿದ್ದೇನೆ. ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ,” ಎಂದು ಸ್ಪಷ್ಟನೆ ನೀಡಿದ್ದಾರೆ.