Connect with us

KARNATAKA

ಫ್ರೌಢಶಾಲೆ ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಚಿತ್ರದುರ್ಗದ ಮಠದ ಮುರುಘಾಶರಣರ ವಿರುದ್ಧ ಎಫ್ಐಆರ್

ಮೈಸೂರು ಅಗಸ್ಟ್ 27: ತಮ್ಮದೇ ಮಠ ನಡೆಸುವ ಫ್ರೌಢಶಾಲೆಯ ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮೇಲೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.


ಮಠದ ಉಚಿತ ಹಾಸ್ಟೆಲ್‌ನಲ್ಲಿರುವ ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ, ದೌರ್ಜನ್ಯಕ್ಕೆ ಒಳಗಾದವರೆನ್ನಲಾದ ವಿದ್ಯಾರ್ಥಿನಿಯರಿಬ್ಬರು ಮೈಸೂರಿನ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಡನಾಡಿ ಸಂಸ್ಥೆಗೆ ಶುಕ್ರವಾರ ದೂರು ನೀಡಿದ್ದಾರೆ. ದೂರು ಪಡೆದು, ಆಪ್ತ ಸಮಾಲೋಚನೆ ನಡೆಸಿರುವ ಸಂಸ್ಥೆಯು ಮಧ್ಯಾಹ್ನವೇ ಈ ಬಾಲಕಿಯರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದೆ.

ಇದೀಗ ಮಠದ ಸ್ವಾಮಿಜಿ ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್‌ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಶುಕ್ರವಾರ ದೂರು ದಾಖಲಾಗಿದೆ. ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ (ಮರಿಸ್ವಾಮಿ) ಮೂರನೇ ಆರೋಪಿ. ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್‌ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ದೂರು ’ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ‘ ಎಂದು ದೂರಿನಲ್ಲಿ ತಿಳಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *