LATEST NEWS
ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದಲೇ ಪ್ರವೀಣ್ ನೆಟ್ಟಾರು ಹತ್ಯೆ – ಎನ್ಐಎ ಚಾರ್ಜ್ ಶೀಟ್ ನಲ್ಲಿ ಮಾಹಿತಿ
ಮಂಗಳೂರು ಅಗಸ್ಟ್ 03: ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದಲೇ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬುವರರನ್ನು ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಗಾಯಗೊಂಡಿದ್ದ ಪ್ರವೀಣ್ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.
ಈ ಪ್ರಕರಣದ ತನಿಖೆಗೆ ಕೈಗೆತ್ತಿಕೊಂಡಿದ್ದ ಎನ್ಐಎ , ಪ್ರಮುಖ ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು. ಇದೀಗ ಪ್ರಕರಣದ ಆರೋಪಿಗಳಾದ ಮುಸ್ತಫಾ ಪೈಚಾರ್ ಹಾಗೂ ರಿಯಾಜ್ ಎಚ್.ವೈ. ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಕೋರ್ಟ್ ಗೆ ಶುಕ್ರವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಪ್ರಕರಣದಲ್ಲಿ ಇದುವರೆಗೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಮುಸ್ತಫಾ ಪೈಚಾರ್ ಪ್ರಕರಣದ ಪ್ರಮುಖ ಸಂಚುಕೋರನಾಗಿದ್ದು, ತಲೆಮರೆಸಿಕೊಂಡಿದ್ದ ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಲಾಗಿತ್ತು. ರಾಜ್ಯದಲ್ಲಿ ಪಿಎಫ್‌ಐ ಸೇವಾ ತಂಡದ ಮಾಸ್ಟರ್ ತರಬೇತುದಾರನಾಗಿದ್ದ. ಈತ ಈ ತಂಡವನ್ನು ಮುನ್ನಡೆಸುತ್ತಿದ್ದ. ತನಿಖೆ ವೇಳೆ ಎಚ್.ವೈ.ರಿಯಾಜ್ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ’ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.
ಭಾರತದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಆರೋಪಿ ರಿಯಾಜ್‌ನನ್ನು ಜೂನ್ 3ರಂದು ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಂಧಿಸಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಏಳು ಮಂದಿಯ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಎನ್‌ಐಎ ತಿಳಿಸಿದೆ.