LATEST NEWS
ಹೊಟೇಲ್ ಕ್ಲಬ್ ಗಳಲ್ಲಿ ಹೊಸ ವರ್ಷಾಚರಣೆಗೆ ಅನುಮತಿ ಕಡ್ಡಾಯ
ಹೊಟೇಲ್ ಕ್ಲಬ್ ಗಳಲ್ಲಿ ಹೊಸವರ್ಷಾಚರಣೆಗೆ ಅನುಮತಿ ಕಡ್ಡಾಯ
ಮಂಗಳೂರು ಡಿಸೆಂಬರ್ 11 : 2020ರ ಹೊಸ ವರ್ಷದ ಆಚರಣೆಯ ಸಂಬಂಧ ಮಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾರ್ವಜನಿಕರಿಗೆ, ಹೋಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ ವಹಿಸಲಾಗಿದೆ.
ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೋಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲೀಕರು ನೂತನ ವರ್ಷಾಚರಣೆ ಆಚರಿಸಲು ಏರ್ಪಡಿಸಲು ಇಚ್ಚಿಸಿದಲ್ಲಿ ಈ ಕುರಿತು ಕಡ್ಡಾಯವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಡಿಸೆಂಬರ್ 24, ಸಂಜೆ 4 ಗಂಟೆಯೊಳಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಅರ್ಜಿ ಸಲ್ಲಿಸಿ, ಪೂರ್ವಾನುಮತಿ ಪಡೆದುಕೊಳ್ಳಬೇಕು. ಪೂರ್ವಾನುಮತಿ ಪಡೆಯದೆ ನೂತನ ವರ್ಷಾಚರಣೆ ಆಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲಾ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 12 ಗಂಟೆಯೊಳಗೆ ಕಡ್ಡಾಯವಾಗಿ ಮುಕ್ತಾಯಗೊಳಿಸಬೇಕು, ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ಆಯೋಜಿಸುವವರು ಸಂಬಂಧಪಟ್ಟ ಇಲಾಖೆಗಳಿಂದ ಪಡೆದ ಪರವಾನಿಗೆಯಲ್ಲಿ ನೀಡಿದ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಬೆತ್ತಲೆ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಶುಭಕೋರುವ ನೆಪದಲ್ಲಿ ಕೀಟಲೆ/ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಕಾರ್ಯಪಡೆಯು ಕಾರ್ಯನಿರತವಾಗಿದ್ದು ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಕಾರ್ಯಪಡೆ ಮಂಗಳೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ.
ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಏರ್ಪಡಿಸಲಾಗಿರುವ ಹೊಸ ವರ್ಷಾಚರಣೆಯ ಕಾರ್ಯಕ್ರಮದ ಹಾಗೂ ಇನ್ನಿತರೆ ನೆಪದಲ್ಲಿ ಬಸ್ಸು ತಂಗುದಾಣ, ಸಾರ್ವಜನಿಕ ಉದ್ಯಾನವನಗಳು, ಕ್ರೀಡಾಂಗಣಗಳಲ್ಲಿ, ರೈಲ್ವೇ ಸ್ಟೇಶನ್ ಹಾಗೂ ಇನ್ನಿತರೇ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ, ವಿದ್ಯಾರ್ಥಿಗಳು ಹಾಗೂ ಯುವಕರು ಡಿಸೆಂಬರ್ 31 ರ ರಾತ್ರಿ ಹೊಸ ವರ್ಷಾಚರಣೆ ನೆಪದಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು, ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಹೊಸ ವರ್ಷವನ್ನು ಆಚರಿಸುವವರು ಡಿಸೆಂಬರ್ 31 ರ ರಾತ್ರಿ ಹೊಸ ವರ್ಷ ಆಚರಣೆ ನೆಪದಲ್ಲಿ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಛೆಗೆ ವಿರುದ್ಧವಾಗಿ ಶುಭಕೋರುವ ನೆಪದಲ್ಲಿ ಕಿರಿಕಿರಿ ಮಾಡಬಾರದು ಎಂದು ಮಂಗಳೂರು ನಗರ, ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.