LATEST NEWS
ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಜೊತೆ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟ ಪೊಲೀಸರ ವಿರುದ್ದ ಆಕ್ರೋಶ
ಪುತ್ತೂರು ಎಪ್ರಿಲ್ 26: ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆ ಪದಾಧಿಕಾರಿಗಳು ಹಾಗೂ ಅರುಣ್ ಕುಮಾರ್ ಪುತ್ತಿಲ ಸಹಿತ ನೂರಾರು ಮಂದಿ ರಾತ್ರಿ ವೇಳೆಯೇ ಠಾಣೆಯ ಮುಂದೆ ಜಮಾಯಿಸಿ ಪೊಲೀಸರ ನಡೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸದಿದ್ದರೆ ಪುತ್ತೂರಿನಲ್ಲಿ ಎಲ್ಲಾ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಎಚ್ಚರಿಕೆ ನೀಡಿದರು.
ಡಾಕ್ಟರ್ ಸ್ ಫೋರಂ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಸರಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಪುತ್ತೂರಾಯರವರು ವಾರ್ಡ್‌ಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ ತೊಂದರೆ ಅಗುತ್ತಿದೆ ಎಂದಾಗ ಅಲ್ಲಿದ್ದ ಮಹಿಳೆ ಹಾಗೂ ಅವರ ಮಗ ಏಕಾಏಕಿ ವೈದ್ಯೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಪೊಲೀಸರು ಆರೋಪಿಯನ್ನು ಠಾಣೆಗೆ ಕರೆತಂದು ನಂತರ ಬಿಟ್ಟಿದ್ದಾರೆ. ಇದಕ್ಕೆ ಆರೋಪಿಯ ಜೊತೆ ಮಗು ಇದೆ ಕಾರಣ ನೀಡಿರುವುದು ಖಂಡನೀಯ. ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು