ಪುತ್ತೂರು: ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಮೀಸಲಿಟ್ಟ ಸೇಡಿಯಾಪು ಜಾಗದಲ್ಲೇ 300 ಹಾಸಿಗೆಗಳ ನೂತನ ಆಸ್ಪತ್ರೆ ತಲೆ ಎತ್ತಲಿದೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಬಿಜೆಪಿ ನಾಯಕರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಈಗಿರುವ ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ 300 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ಸಾಧ್ಯವಿಲ್ಲ ಎಂದು ಈ ಹಿಂದಿನ ಬಿಜೆಪಿ ಶಾಸಕರ ಅವಧಿಯಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದೆ. ಈ ಸತ್ಯ ಗೊತ್ತಿದ್ದೂ ಬಿಜೆಪಿಗರು ರಾಜಕೀಯ ಮಾಡುತ್ತಿದ್ದಾರೆ. ಸೇಡಿಯಾಪುವಿನಲ್ಲಿ 40 ಎಕರೆ ಜಾಗವಿದ್ದು, ಅಲ್ಲಿ ಮೆಡಿಕಲ್ ಕಾಲೇಜು, ಆಸ್ಪತ್ರೆ ಹಾಗೂ ಆಯುರ್ವೇದ ಆಸ್ಪತ್ರೆ ಒಟ್ಟಾಗಿ ಬರಲಿವೆ ಎಂದು ಅವರು ಮಾಹಿತಿ ನೀಡಿದರು.
ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಅಕ್ಕಪಕ್ಕದಲ್ಲಿದ್ದರೆ ಜನರಿಗೆ ಅನುಕೂಲ. ಕೊಡಗು ಜಿಲ್ಲೆಯಲ್ಲಿ ಇವೆರಡೂ ಬೇರೆ ಬೇರೆ ಕಡೆ ಇರುವ ಕಾರಣ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಅಂತಹ ತಪ್ಪು ಇಲ್ಲಿ ಆಗಬಾರದು ಎಂಬುದು ಶಾಸಕ ಅಶೋಕ್ ರೈ ಅವರ ಆಶಯ. ಸೇಡಿಯಾಪು ಪ್ರದೇಶಕ್ಕೆ ಸಂಪರ್ಕ ಕಲ್ಪಿಸಲು ಚತುಷ್ಪಥ ರಸ್ತೆಯಿದೆ ಮತ್ತು ಮೂಲಭೂತ ಸೌಕರ್ಯಗಳನ್ನು ಸರ್ಕಾರ ಒದಗಿಸಲಿದೆ,” ಎಂದು ಹೇಮನಾಥ ಶೆಟ್ಟಿ ಹೇಳಿದರು.
ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಹಿಂದೆ ಮೀನು ಕಾರ್ಖಾನೆ ಮಾಡಲು ಮುಂದಾಗಿದ್ದ ಬಿಜೆಪಿಗರು ಈಗ ಕಾಲೇಜಿನ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ. ಶಾಸಕ ಅಶೋಕ್ ಕುಮಾರ್ ರೈ ಅವರು ಅಸಾಧ್ಯವಾದುದನ್ನು ಸಾಧ್ಯವಾಗಿಸಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸಿದ್ದಾರೆ. ಇದನ್ನು ಸಹಿಸದ ನಾಲ್ಕೈದು ಜನ ಬಿಜೆಪಿಗರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ,” ಎಂದು ಅವರು ಟೀಕಿಸಿದರು.