KARNATAKA
ದಕ್ಷಿಣಕನ್ನಡ ಜಿಲ್ಲೆಯ ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಸಲ್ಲಿಸಿದ ಬಿಜೆಪಿ ನಿಯೋಗ

ಬೆಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳಿನ ಸಮಸ್ಯೆಗಳ ಪರಿಹಾರಕ್ಕೆ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.

ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳು ಸ್ಥಗಿತಗೊಂಡಿದೆ. ಇದು ನಮ್ಮ ಜಿಲ್ಲೆಯ ಆರ್ಥಿಕತೆಗೂ ಹೊಡೆತ ನೀಡಿದ್ದು, ಸಾವಿರಾರು ಕಾರ್ಮಿಕರ ಬದುಕು ದುಸ್ತರಗೊಂಡಿದೆ. ಹಾಗಾಗಿ ಕೂಡಲೇ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸುವಂತೆ ನಮ್ಮೆಲ್ಲರ ಆಗ್ರಹವಾಗಿದೆ.
ಇದೇ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ಸಮೀರ್ ಶುಕ್ಲಾ ರವರನ್ನು ಸಹ ಭೇಟಿ ಮಾಡಿ ಜಿಲ್ಲೆಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಸೇರಿದಂತೆ ಶಾಸಕರುಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ವಸಂತ ಜೆ.ಪೂಜಾರಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.