LATEST NEWS
ನಾಳೆ ಮಂಗಳೂರು ನಗರದಾದ್ಯಂತ ನಿರ್ಬಂಧಕಾಜ್ಞೆ ಜಾರಿ
ನಾಳೆ ಮಂಗಳೂರು ನಗರದಾದ್ಯಂತ ನಿರ್ಬಂಧಕಾಜ್ಞೆ ಜಾರಿ
ಮಂಗಳೂರು ಡಿಸೆಂಬರ್ 5: ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸಗೊಳಿಸಿದ ಘಟನೆಯ ವರ್ಷಾಚರಣೆ ಸಂದರ್ಭದಲ್ಲಿ ವಿಜಯೋತ್ಸವ ಮತ್ತು ಕರಾಳ ದಿನಗಳ ಆಚರಣೆಗೆ ಕೆಲವು ಸಂಘಟನೆಗಳು ನಡೆಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಆದೇಶಿಸಿದ್ದಾರೆ.
ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಣೆಗೆ ಮುಂದಾಗಿವೆ ಮತ್ತು ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಣೆಗೆ ಕರೆನೀಡಿವೆ. ಈ ಸಮಯದಲ್ಲಿ ಅಹಿತಕರ ಘಟನೆಗಳು ಸಂಭವಿಸುವ ಅಪಾಯವಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ವರದಿ ನೀಡಿದ್ದಾರೆ. ಅದನ್ನು ಆಧರಿಸಿ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಸೆಕ್ಷನ್ 35ರ ಅಡಿಯಲ್ಲಿ ಜಾರಿಗೊಳಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಆದೇಶದಲ್ಲಿ ತಿಳಿಸಿದ್ದಾರೆ.
ಗುರುವಾರ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತೆ ರೋಕೊ ಮತ್ತು ಮುತ್ತಿಗೆ ಮುಂತಾದವುಗಳನ್ನು ನಿರ್ಬಂಧಿಸಲಾಗಿದೆ. ಶಾಂತಿ ಸುವ್ಯವಸ್ಥೆಗೆ ಭಂಗ ಬರುವಂತಹ ಘಟನೆಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ ಕರ್ನಾಟಕ ಪೊಲೀಸ್ ಕಾಯ್ದೆ 1993 ಕಲಂ 35ರ ಅನ್ವಯ ನಿರ್ಬಂಧಕಾಜ್ಞೆ ಹೊರಡಿಸಿ ಆದೇಶಿಸಲಾಗಿದೆ.