ಪುತ್ತೂರು ನವೆಂಬರ್ 05: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೆ ಬುಧವಾರ ಸಂಜೆ ಹಾಜರಾದರು. ಪುತ್ತೂರು ಗ್ರಾಮಾಂತರ ಠಾಣೆಯ ತನಿಖಾಧಿಕಾರಿಯ ನೊಟೀಸ್ ಹಿನ್ನೆಲೆ ಪ್ರಭಾಕರ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ.

ಅಕ್ಟೋಬರ್ 20ರಂದು ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿತ್ತು ಎಂದು ಆರೋಪಿಸಿ ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ನೀಡಿದ್ದರು. ದೂರಿನಂತೆ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಅಕ್ಟೋಬರ್ 25ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಭಾಕರ ಭಟ್ ಬಂಧನದ ಭೀತಿಯಿಂದ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಅಲ್ಲಿಸಿದ್ದರು. ಅಕ್ಟೋಬರ್ 27 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ‘ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ’ ನೀಡಿ ಪೂರ್ಣ ಪ್ರಮಾಣದ ವಿಚಾರಣೆ ಮತ್ತು ನಿರೀಕ್ಷಣಾ ಜಾಮೀನು ಸಂಬಂಧ ಅದೇಶವನ್ನು ಅಕ್ಟೋಬರ್ 29 ಕ್ಕೆ ಮುಂದೂಡಿತ್ತು. ಅಕ್ಟೋಬರ್ 29 ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ದೂರುದಾರರಾಗಿರುವ ಈಶ್ವರಿ ಪದ್ಮುಂಜ ಪರ ಹಿರಿಯ ವಕೀಲ ಸತೀಶನ್ ಅವರು ದೂರುದಾರ ಮಹಿಳಾ ಹೋರಾಟಗಾರ್ತಿ ಈಶ್ವರಿ ಪರ ಅರ್ಜಿ ಸಲ್ಲಿಸಿದ್ದರು.
ಸರ್ಕಾರಿ ವಕೀಲರಿಗೆ ಮಾತ್ರ ವಾದಿಸುವ ಮತ್ತು ತಕರಾರು ಅರ್ಜಿ ಸಲ್ಲಿಸುವ ಅವಕಾಶ ಇರುತ್ತದೆ. ದೂರುದಾರರ ಪರ ವಕೀಲರು ತಕರಾರು ಅರ್ಜಿ ಅಥವಾ ವಾದ ಮಂಡಿಸಬೇಕಾದರೆ ಬಿಎನ್‌ಎಸ್‌ಎಸ್ ಸೆಕ್ಷನ್ 338 ಮತ್ತು 339 ರಂತೆ ಅರ್ಜಿ ಸಲ್ಲಿಸಿ ನ್ಯಾಯಾಲಯದ ಅನುಮತಿ ಕೋರಬೇಕಿರುತ್ತದೆ. ಅಕ್ಟೋಬರ್ 29 ರಂದು ವಕೀಲ ಸತೀಶನ್ ಅರ್ಜಿಯನ್ನು ಪಡೆದುಕೊಂಡ ನ್ಯಾಯಾಲಯವು, ಪ್ರಭಾಕರ ಭಟ್ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು ನವೆಂಬರ್ 04 ಕ್ಕೆ ಪ್ರಕರಣವನ್ನು ಮುಂದೂಡಿತ್ತು. ನವೆಂಬರ್ 04 ರಂದು ಅರ್ಜಿ ವಿಚಾರಣೆಗೆ ಬಂದಾಗ ಈಶ್ವರಿ ಪದ್ಮುಂಜ ಪರ ವಕೀಲ ಸತೀಶನ್ ಅವರ ಬಿಎನ್‌ಎಸ್‌ಎಸ್ ಸೆಕ್ಷನ್ 338, 339 ಅರ್ಜಿಗೆ ಪ್ರಭಾಕರ ಭಟ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಿಲ್ಲ. ಅರ್ಜಿ ಸಂಬಂಧ ವಿಸ್ತೃತ ವಾದ ಮಂಡಿಸಲು ವಕೀಲ ಸತೀಶನ್ ಅವರು ಸಮಯಾವಕಾಶ ಕೇಳಿದ್ದು ಅರ್ಜಿ ವಿಚಾರಣೆಯನ್ನು ನವೆಂಬರ್ 10 ಕ್ಕೆ ಮುಂದೂಡಲಾಗಿದೆ. ಈ ಹಿನ್ನಲೆ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿದ್ದಾರೆ.



