LATEST NEWS
ಇಂದಿನಿಂದ ಕೇರಳದಿಂದ ಜಿಲ್ಲೆಗೆ ಬರುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ
ಮಂಗಳೂರು: ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಬರುವವರಿಗೆ ಇಂದಿನಿಂದ ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಾಹನಗಳ ತಪಾಸಣೆ ನಡೆಸಿದ ಬಳಿಕ ಈ ಮಾಹಿತಿ ನೀಡಿದ ಅವರು ಮಂಗಳವಾರದಿಂದ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯಲಿದ್ದು, ಜಿಲ್ಲೆಗೆ ಆಗಮಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದರು, ಗಡಿ ಭಾಗದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದು, ಡೆಲ್ಟಾ ವೇರಿಯಂಟ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ ಎಂದರು.
ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ. ತಲಪಾಡಿ, ನೆಟ್ಟಣಿಗೆ ಮುಡ್ನೂರು, ಸಾರಡ್ಕ, ಜಾಲ್ಸೂರಿನಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಂಚಾರ ಹೆಚ್ಚಿರುವಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರಬೇಕು. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ನಡುವೆ ಹಲವಾರು ರೋಗಿಗಳು ಬಂದು ಹೋಗುವುದರಿಂದ ಆಸ್ಪತ್ರೆಗಳಲ್ಲಿ ಆರ್‌ಟಿಪಿಸಿಎಸ್ ಪರೀಕ್ಷೆ ಮಾಡಿಸಬೇಕು ಎಂದು ತಿಳಿಸಿದರು.