KARNATAKA
ಬಿಜೆಪಿಗೆ ಗುಡ್‌ಬೈ ಹೇಳಿ ಕಾಂಗ್ರೆಸ್ ಮನೆ ಸೇರಿದ ಜಯಪ್ರಕಾಶ್ ಹೆಗ್ಡೆ, ಉಡುಪಿ ಚಿಕ್ಕಮಗಳೂರಿನಿಂದ ಕಣಕ್ಕೆ..!

ಉಡುಪಿ, ಮಾರ್ಚ್ 12: ಜಯಪ್ರಕಾಶ್ ಹೆಗ್ಡೆ ಅವರು ಇಂದು ಅಧಿಕೃತವಾಗಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಉಡುಪಿ ಚಿಕ್ಕಮಗಳೂರಿಗೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕರಾವಳಿಯ ಪ್ರಬಲ ನಾಯಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಬಿಜೆಪಿಗೆ ಗುಡ್‌ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಸಜ್ಜಾಗಿದ್ದಾರೆ. ಇಂದು ಅಧೀಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅವರು ಕಾಂಗ್ರೆಸ್ ಗೆ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ಕರಾವಳಿಯ ಅಭಿವೃದ್ಧಿಯ ಗುರಿ ಸಾಧನೆಗಾಗಿ ರಾಜಕೀಯದಲ್ಲಿ ಮತ್ತೆ ಸಕ್ರಿಯನಾಗಲು ನಿರ್ಧರಿಸಿದ್ದೇನೆ. ಅದರಂತೆ ಮಾ.12ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿ ಮುಂದಿನ ರಾಜಕೀಯ ನಡೆಯನ್ನು ನಿರ್ಧರಿಸಲು ನಿರ್ಣಯಿಸಿದ್ದೇನೆ ಎಂದು ಕೆ.ಜಯಪ್ರಕಾಶ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಈ ಹಿಂದೆ ಆಗಿನ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು.
ಬಳಿಕ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ನೀಡಿತ್ತು. ಅವರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದರು. ಆಯೋಗದ ಅಧ್ಯಕ್ಷ ಅವಧಿ ಮುಗಿದ ಆನಂತರ ಕಾಂಗ್ರೆಸ್ ಸೇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದರು.