Connect with us

    LATEST NEWS

    ನಾಳೆಯಿಂದ ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭ ಆರಂಭ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

    ಮಂಗಳೂರು, ಡಿಸೆಂಬರ್ 31: ಜನವರಿ 1 ರಿಂದ ಶಾಲೆಗಳ ಪುನರಾಂಭವಾಗುವ ಹಿನ್ನೆಲೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲೆಗಳಲ್ಲಿ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಶಾಲಾ ಆವರಣ ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ವಹಿಸಲಾಗಿದೆ. ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತ್, ನಗರ ಪ್ರದೇಶದ ಶಾಲೆಗಳಲ್ಲಿ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತ್ ವತಿಯಿಂದ ಸ್ಯಾನಿಟೈಸ್ ಮಾಡಲು ಅಗತ್ಯ ಕ್ರಮ ವಹಿಸಲಾಗಿದೆ.


    ಪ್ರತೀ ಶಾಲೆಯಲ್ಲಿ ದೈಹಿಕ ಉಷ್ಣಾಂಶ ಪರೀಕ್ಷೆ ನಡೆಸಲು ಥರ್ಮಲ್ ಸ್ಕ್ಯಾನರ್ ಉಪಕರಣ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಎಲ್ಲಾ ಶಿಕ್ಷಕರು ಮತ್ತು ಭೋಧಕೇತರ ಶಾಲಾ ಸಿಬ್ಬಂದಿಗಳಿಗೆ ಆರ್.ಟಿ.ಪಿ.ಸಿಆರ್ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದ್ದು ಈಗಾಗಲೇ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಆದರೆ ಶಾಲೆಗೆ ಬರುವ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಶಾಲಾ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು. ಶಿಕ್ಷಣ ಇಲಾಖೆಯ ಎಲ್ಲಾ ಉಸ್ತುವಾರಿ ಅಧಿಕಾರಿಗಳು ಜನವರಿ 1 ರಿಂದ 8 ರವರೆಗೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಲು ಸೂಚಿಸಲಾಗಿದೆ.

    ಕೋವಿಡ್-19ರ ಮಾರ್ಗಸೂಚಿಯಂತೆ ಹಾಗೂ ಇಲಾಖೆಯು ನೀಡಿರುವ ಎಸ್.ಓ.ಪಿ.ಯಂತೆ ಕಾರ್ಯನಿರ್ವಹಿಸಬೇಕು. ಉಲ್ಲಂಘನೆಯಾದರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲಾ 7 ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಶಾಲಾ ಮುಖ್ಯೋಪಾಧ್ಯಾಯರುಗಳು ಹಾಗೂ ಆಡಳಿತ ಮಂಡಳಿಗಳ ಮುಖ್ಯಸ್ಥರ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಲಾಗಿರುತ್ತದೆ. ಹಾಸ್ಟೆಲ್‍ಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಅಗತ್ಯ ಕ್ರಮ ವಹಿಸಲು ಮೇಲ್ವಿಚಾರಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

    ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಇರುವುದಿಲ್ಲ, ಆದುದರಿಂದ ಮಕ್ಕಳು ಬಿಸಿ ನೀರು ಹಾಗೂ ಉಪಹಾರದ ವ್ಯವಸ್ಥೆಯನ್ನು ತಮ್ಮ ಮನೆಯಿಂದ ತರಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ಮುಖ್ಯೋಪಾಧ್ಯಾಯರು ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿಗಳನ್ನು ನಡೆಸಬೇಕು, ಶಾಲೆಗಳಲ್ಲಿ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ವಿದ್ಯಾರ್ಥಿಗಳು ಸುರಕ್ಷತೆಗೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗಿದ್ದು ಪೋಷಕರು ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply