LATEST NEWS
ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತ ಪೋಸ್ಟ್….21 ಕೇಸ್ ದಾಖಲು

ಮಂಗಳೂರು ಜುಲೈ 12 : ಸಾಮಾಜಿಕ ಜಾಲತಾಣಗಳಾದ ‘ವಾಟ್ಸ್ ಆ್ಯಪ್, ಫೇಸ್ ಬುಕ್, ಇನ್ಸ್ಟಾಗ್ರಾಂ ಟ್ವಿಟರ್ ಗಳಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ದ ಇದೀಗ ಮಂಗಳೂರು ಪೊಲೀಸರ ಸಮರ ಸಾರಿದ್ದು, ಒಂದು ತಿಂಗಳಿನಲ್ಲಿ 21 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ’ ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.
‘ಧರ್ಮಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಸಂದೇಶಗಳನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಹಾಗೂ ಅವುಗಳ ಕುರಿತ ಅಭಿಪ್ರಾಯ ವ್ಯಕ್ತಪಡಿಸುವ ವ್ಯಕ್ತಿಗಳ ಮೇಲೆ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಹಾಗೂ ಸಾಮಾಜಿಕ ಮಾಧ್ಯಮ ಕೋಶದ ಮೂಲಕ ನಿಗಾ ವಹಿಸುತ್ತಿದ್ದೇವೆ. ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶ ಹಂಚಿಕೊಂಡು ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಅಪರಾಧ ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿದ್ದೇವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
