National
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ದೆಹಲಿ ಆಸ್ಪತ್ರೆಗೆ ದಾಖಲು

ನವದೆಹಲಿ, ಜುಲೈ 30: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದಿಢೀರ್ ಆಗಿ ದೆಹಲಿಯಲ್ಲಿರುವ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜೆ 7 ಗಂಟೆ ಸುಮಾರಿಗೆ ಸೋನಿಯಾ ಗಾಂಧಿ ರೂಟೀನ್ ಚೆಕಪ್ ಮಾಡುವುದಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಮಾಮೂಲಿ ಚೆಕ್ಕಿಂಗ್ ಮಾಡುವುದಕ್ಕಾಗಿ ಸೋನಿಯಾ ದಾಖಲಾಗಿದ್ದಾರೆ. ಅವರು ದೈಹಿಕವಾಗಿ ಸ್ಥಿರತೆ ಕಾಪಾಡಿಕೊಂಡಿದ್ದಾರೆ. ಪರೀಕ್ಷೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆ ಮಂಡಳಿ ಅಧ್ಯಕ್ಷ ಡಾ.ಡಿ.ಎಸ್ ರಾಣಾ ಹೇಳಿದ್ದಾರೆ. ಕಳೆದ ಫೆಬ್ರವರಿ ತಿಂಗಳಲ್ಲೂ ಸೋನಿಯಾ ಗಾಂಧಿ ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಂದರ್ಭದಲ್ಲಿ ಸೋನಿಯಾಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿತ್ತು.

ಸೋನಿಯಾ ಗಾಂಧಿ ಇಂದು ಮೂರು ಗಂಟೆಗೂ ಹೆಚ್ಚು ಕಾಲ ವರ್ಚುವಲ್ ಮೀಟಿಂಗ್ ನಲ್ಲಿ ಭಾಗವಹಿಸಿದ್ದರು. ಪಕ್ಷದ ಸಂಸದರು ಮತ್ತು ರಾಜ್ಯಸಭಾ ಸದಸ್ಯರ ಜೊತೆಗಿನ ಸಭೆಯಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆ ವಿಚಾರದಲ್ಲಿ ಚರ್ಚೆ ನಡೆದಿತ್ತು. ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಪಾಲ್ಗೊಂಡಿದ್ದರು. ಸಭೆಯಲ್ಲಿ ಎಲ್ಲ ಸಂಸದರ ಅಭಿಪ್ರಾಯವನ್ನೂ ಸೋನಿಯಾ ಗಾಂಧಿ ಆಲಿಸಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.