LATEST NEWS
ಸೌಜನ್ಯ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿದ ಪೊಲೀಸ್ ಅಧಿಕಾರಿಗಳು ಹಾಗೂ ವೈದ್ಯರ ವಿರುದ್ದ ತನಿಖೆಗೆ ಮನವಿ….!!

ಮಂಗಳೂರು ಸೆಪ್ಟೆಂಬರ್ 21: ಸೌಜನ್ಯ ಮೇಲೆ ಅತ್ಯಾಚಾರ ನಡೆಸಿಕೊಲೆ ಮಾಡಿದ ಪ್ರಕರಣದ ಮರು ತನಿಖೆ ನಡೆಸಿದ ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಸೌಜನ್ಯಾಳ ತಾಯಿ ಕುಸುಮಾವತಿ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದರು.
ನನ್ನ ಮಗಳು ಸೌಜ್ಯನಳ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ನಾಶ ಮಾಡುವ ಮೂಲಕ ನೈಜ ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳು ಹಾಗೂ ವೈದ್ಯರು ಸಹಕರಿಸಿದ್ದಾರೆ. ಅವರ ವಿರುದ್ಧವೂ ತನಿಖೆ ನಡೆಸಬೇಕು. ಆರೋಪಿಗಳ ಹೆಸರನ್ನು ನಮೂದಿಸಿ ಹಿಂದೆಯೇ ದೂರು ನೀಡಿದ್ದರೂ ಅವರನ್ನು ತನಿಖೆಗೆ ಒಳಪಡಿಸಿಲ್ಲ‘ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಅಲ್ಲದೆ ಇತ್ತೀಚೆಗೆ ಸೌಜನ್ಯ ಕೊಲೆ ಆರೋಪಿಗಳ ಪತ್ತೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಗಳನ್ನು ನಡೆಸಲಾಗುತ್ತಿದ್ದು, ಹೋರಾಟದ ಮುಂಚೂಣಿಯಲ್ಲಿರುವವರನ್ನು ಹೆಸರಿಸಿ ಉಜಿರೆಯ ವ್ಯಕ್ತಿಯೊಬ್ಬರು ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಬಂಟ್ವಾಳದ ಈಗಿನ ಡಿವೈಎಸ್‌ಪಿ ಅವರು ಹೋರಾಟಗಾರರನ್ನು ಅನಗತ್ಯವಾಗಿ ಠಾಣೆಗೆ ಕರೆಯಿಸಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಕುಸುಮಾವತಿ ಆರೋಪಿಸಿದ್ದಾರೆ. ’ಈ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಕಿರುಕುಳ ಆಗದಂತೆ ರಕ್ಷಣೆ ಒದಗಿಸಬೇಕು’ ಎಂದು ಒತ್ತಾಯಿಸಿ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಇನ್ನೊಂದು ಮನವಿ ಸಲ್ಲಿಸಿದ್ದಾರೆ.
‘ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹಸಚಿವರೊಂದಿಗೆ ಮಾತನಾಡುತ್ತೇನೆ’ ಎಂದು ಸಚಿವರು ಭರವಸೆ ನೀಡಿದರು.