LATEST NEWS
ಯಾವುದಾದರೂ ತನಿಖೆಗೆ ಆದೇಶಿಸಿ…..ಸೌಜನ್ಯ ಕೇಸ್ ತನಿಖೆಗಾಗಿ ಕೋರ್ಟ್ ಮೊರೆ ಹೋದ ಹೆಗ್ಗಡೆ ಕುಟುಂಬ
ಮಂಗಳೂರು ಅಗಸ್ಟ್ 28: ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆ ಗಳು ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಲು ಮತ್ತೆ ಯಾ ವುದಾದರೂ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಡಾ.ಹೆಗ್ಗಡೆ ಕುಟುಂಬದವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ನ್ಯಾಯಾಲಯದ ಆದೇಶಗಳನ್ನು ತಿರುಚಿ ಸತ್ಯ ಮರೆಮಾಚುತ್ತಿರುವ, ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿರುವ ಹಾಗೂ ನ್ಯಾಯಾಲಯ ಮತ್ತು ನ್ಯಾಯಾಧೀಶರನ್ನು ನಿಂದಿಸುತ್ತಿರುವ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಡಾ.ಹೆಗ್ಗಡೆ ಕುಟುಂಬ ದವರ ಪರ ಕೋರ್ಟ್‌ಗೆ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿದೆ.
ರಾಜ್ಯ ಸರ್ಕಾರ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಉಪ ವಿಭಾಗದ ಡಿವೈಎಸ್‌ಪಿ, ಬೆಳ್ತಂಗಡಿ ಮತ್ತು ಧರ್ಮಸ್ಥಳಗಳ ಠಾಣಾಧಿಕಾರಿಗಳು ಹಾಗೂ ಮಹೇಶ್ ಶೆಟ್ಟಿ ಅಲಿಯಾಸ್ ರವಿ ಅಲಿಯಾಸ್ ಮಹೇಶ್ ತಿಮರೋಡಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯಗಳು ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರು, ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ಹಾಗೂ ಅದನ್ನು ವರದಿ ಮಾಡದಂತೆ ಮಾಧ್ಯಮಗಳು ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಅದಾಗ್ಯೂ, ಮಹೇಶ್ ತಿಮರೋಡಿ ಅವರು ನಿರಾಧಾರ ಆರೋಪಗಳನ್ನು ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬಸ್ಥರ ವಿರುದ್ಧ ಮಾಡುತ್ತಿದ್ದಾರೆ. ಭಾರತೀಯ ನ್ಯಾಯಾಂಗ ವ್ಯವಸ್ಥೆಯ ವಿರುದ್ಧವೂ ಆಕ್ಷೇಪಾರ್ಹವಾದ ಮಾತುಗಳನ್ನು ಆಡುವ ಮೂಲಕ ಅಗೌರವ ತೋರಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.