ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ಹೆಸರಲ್ಲಿ ಕೋಮು ಪ್ರಚೋದನೆ ಪೊಸ್ಟ್ ಮಾಡಿದರೆ ಕ್ರಿಮಿನಲ್ ಪ್ರಕರಣ

ಮಂಗಳೂರು, ಎಪ್ರಿಲ್ 6:ಕೊರೊನಾ ವೈರಸ್ ಸಂಬಂಧಿಸಿದಂತೆ ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಪೋಸ್ಟ್ ಗಳನ್ನು ಹಾಕುತ್ತಿರುವವರ ವಿರುದ್ದ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿದಿಷ್ಟ ಕೋಮನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಹಾಗೂ ಕೋಮು ಪ್ರಚೋಚದನಾಕಾರಿಯಾಗಿ ಸುದ್ದಿಗಳನ್ನು, ಬರಹಗಳನ್ನು ಪ್ರಸಾರ ಮಾಡುತ್ತಿರುವುದು ಕಂಡುಬರುತ್ತಿದೆ. ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಈ ಬಗ್ಗೆ ನಾಲ್ಕು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ ಅವರು ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತಹ ಫೇಸ್‌ಬುಕ್/ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಸುದ್ದಿ/ಚಿತ್ರಗಳನ್ನು ಪ್ರಸಾರ ಮಾಡಿದರೆ ಅವರ ಮೊಬೈಲ್ ನ್ನು ವಶಪಡಿಸಿಕೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದರು.

ಆಸ್ಪತ್ರೆ ಕ್ವಾರಂಟೈನ್ ನಲ್ಲಿರುವ ಈ ರೀತಿ ಸಂದೇಶಗಳನ್ನು ಕಳುಹಿಸಿದರೆ ಅವರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿಟ್ಟು ಕ್ವಾರಂಟೈನ್ ಅವಧಿ ಮುಗಿದ ಕೂಡಲೇ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕರು ಎಚ್ಚರಿಕೆ ನೀಡಿದ್ದಾರೆ.