ಬೆಂಗಳೂರು, ಮಾರ್ಚ್ 18: ರಾಜ್ಯಾದ್ಯಂತ ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಪರೀಕ್ಷೆಯಾದ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1 ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ. ಪರೀಕ್ಷಾ ಮಂಡಳಿಯು ಸುಗಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಅಕ್ರಮಗಳು ನಡೆಯದಂತೆ ‘ಹದ್ದಿನ ಕಣ್ಣು’ ಇಟ್ಟಿದೆ.

ಇಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:15 ರವರೆಗೆ ಪ್ರಥಮ ಭಾಷೆ ವಿಷಯದ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ 7,75,979 ಹೊಸ ವಿದ್ಯಾರ್ಥಿಗಳಾಗಿದ್ದರೆ, 62,938 ಪುನರಾವರ್ತಿತ (Repeaters) ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದಾದ್ಯಂತ ಒಟ್ಟು 2,870 ಕೇಂದ್ರಗಳಲ್ಲಿ ಪರೀಕ್ಷಾ ವ್ಯವಸ್ಥೆ ಮಾಡಲಾಗಿದೆ.
ಸಚಿವರ ಭೇಟಿ ಮತ್ತು ಶುಭ ಹಾರೈಕೆ:
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಭ ಹಾರೈಸಿದ್ದಾರೆ. ಇಂದು ಬೆಳಗ್ಗೆ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ ಸಚಿವರು, ಪರೀಕ್ಷಾ ಕೇಂದ್ರದ ಸಿದ್ಧತೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. “ಯಾವುದೇ ಭಯವಿಲ್ಲದೆ, ನಿರಾಳವಾಗಿ ಪರೀಕ್ಷೆ ಬರೆಯಿರಿ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅಕ್ರಮ ತಡೆಗೆ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳು
ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಪರೀಕ್ಷಾ ಮಂಡಳಿ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿವೆ. ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳು ನೇರವಾಗಿ ವೆಬ್ಕಾಸ್ಟಿಂಗ್ ಮೂಲಕ ಮನಿಟರ್ ಮಾಡಲಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಹಾಗೂ ಕಂಪ್ಯೂಟರ್ ಶಾಪ್ಗಳನ್ನು ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ.
ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಮತ್ತು ಸ್ಮಾರ್ಟ್ ವಾಚ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಕೇಂದ್ರಗಳಿಗೆ ಸಾಗಿಸುವಾಗ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ ಮತ್ತು ಈ ಪ್ರಕ್ರಿಯೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ. ಪ್ರತಿ ಕೇಂದ್ರದಲ್ಲಿ ಸಿಟ್ಟಿಂಗ್ ಮತ್ತು ಫ್ಲೈಯಿಂಗ್ ಸ್ಕ್ವಾಡ್ಗಳನ್ನು ನಿಯೋಜಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆ ನಿಗಾ ಇಡಲು ಸೈಬರ್ ಪೊಲೀಸ್ ತಂಡ ಸನ್ನದ್ಧವಾಗಿದೆ.
ನಿರ್ದಿಷ್ಟ ಸಮಯಕ್ಕಿಂತ ಮೊದಲು ಪ್ರಶ್ನೆ ಪತ್ರಿಕೆ ತೆರೆಯುವುದು ಅಥವಾ ಅಕ್ರಮಗಳಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಂಡಳಿ ಎಚ್ಚರಿಕೆ ನೀಡಿದೆ.