DAKSHINA KANNADA
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇದಾಜ್ಞೆ ಜಾರಿ
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇದಾಜ್ಞೆ ಜಾರಿ
ಬೆಂಗಳೂರು/ಉಡುಪಿ ಮಾರ್ಚ್ 21 : ರಾಜ್ಯದ 10ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪ್ರಾರಂಭವಾಗಲಿದೆ.
ಇಂದಿನಿಂದ ಏಪ್ರಿಲ್ .4 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ರಾಜ್ಯಾದ್ಯಂತ ಒಟ್ಟು 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 8.41 ಲಕ್ಷ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಂಡಿದೆ.
ರಾಜ್ಯದ ಒಟ್ಟು 5,202 ಸರ್ಕಾರಿ, 3,244 ಅನುದಾನಿತ ಹಾಗೂ 6,004 ಅನುದಾನರಹಿತ ಶಾಲೆಗಳು ಸೇರಿ 14,450 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ .ದಕ್ಷಿಣ ಕನ್ನಡ ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿವೆ.
ಈ ಬಾರಿ ಉಡುಪಿ ಜಿಲ್ಲೆಯಲ್ಲಿ 14,214 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿವೆ. ಪರೀಕ್ಷೆ ಬರೆಯುವ ವಿಕಲ ಚೇತನ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆಯನ್ನು ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿ ಸೇರಿ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನುಜಾರಿಗೊಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಸಿಕಾಂತ್ ಸೆಂಥಿಲ್ ಈ ಆದೇಶ ಹೊರಡಿಸಿದ್ದರೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು ಇನ್ನಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ. ಹಾಗೂ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು , ಇನ್ನಿತರ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಇನ್ನು ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.