KARNATAKA
ಧರ್ಮಸ್ಥಳದ ಕುರಿತು ಮಾನಹಾನಿ ಹೇಳಿಕೆ ನೀಡದಂತೆ ಬೆಂಗಳೂರು ಕೋರ್ಟ್ ನಿಂದ ತಡೆಯಾಜ್ಞೆ

ಬೆಂಗಳೂರು ಜುಲೈ 19: ಧರ್ಮಸ್ಥಳದಲ್ಲಿ ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬಗ್ಗೆ ಮಾನಹಾನಿ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಜಯ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ
ಶೀಕ್ಷೇತ್ರ ಧರ್ಮಸ್ಥಳ ದೇವಾಲಯ ಸುತ್ತಮುತ್ತ ಅಪರಿಚಿತ ಮೃತ ದೇಹಗಳನ್ನು ಹೂತುಹಾಕಲಾಗಿದೆ ಎನ್ನಲಾದ ವಿಚಾರ ಸಂಬಂಧ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವಿರೇಂದ್ರ ಹೆಗ್ಗಡೆ ಮತ್ತು ಅವರ ಸಹೋದರ ಕುಟುಂಬದವರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ನಿರ್ಬಂಧಕಾಜ್ಞೆ ಹೊರಡಿಸಿದೆ.

ಪ್ರಕರಣದ ಕುರಿತು ತಮ್ಮ ಕುಟುಂಬದವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಮತ್ತು ಅವಹೇಳನಕಾರಿ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಯೂಟ್ಯೂಬರ್ ಎಂ.ಡಿ. ಸಮೀರ್ ಮತ್ತು ಮಾಧ್ಯಮದವರ ನಿರ್ದೇಶಿಸಿ ನಿರ್ಬಂಧಕಾಜ್ಞೆ ಹೊರಡಿಸಬೇಕು ಎಂದು ಕೋರಿ ಡಿ.ಹರ್ಷೇಂದ್ರ ಕುಮಾರ್ ಅಸಲು ದಾವೆ ದಾಖಲಿಸಿದ್ದಾರೆ. ದಾವೆಯ ವಿಚಾರಣೆ ನಡೆಸಿದ 11ನೇ ಹೆಚ್ಚುವರಿ (ಸಿಸಿಎಚ್-26) ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ನಿರ್ಬಂಧಕಾಜ್ಞೆ ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.
ಏನಿದು ಪ್ರಕರಣ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4ರಂದು ಪ್ರಕರಣ ದಾಖಲಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ದೊಡ್ಡಮಟ್ಟದ ಪರ- ವಿರೋಧ ಅಭಿಪ್ರಾಯಗಳು, ಚರ್ಚೆಗಳನ್ನೂ ಹುಟ್ಟುಹಾಕಿದೆ. ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ತನಗೆ ಜೀವ ಬೆದರಿಕೆ ಒಡ್ಡಿ, ಮೃತದೇಹಗಳನ್ನು ತನ್ನ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ರೀತಿ ಹಲವಾರು ಮೃತದೇಹಗಳನ್ನು ತಾನು ವಿಲೇವಾರಿ ಮಾಡಿದ್ದು, ಅದರಿಂದ ಪಾಪಪ್ರಜ್ಞೆ ಕಾಡುತ್ತಿರುವುದರಿಂದ ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೆ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿ ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ಸಿದ್ಧನಿರುವುದಾಗಿ’ ಆ ಅಜ್ಞಾತ ವ್ಯಕ್ತಿ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಬಗ್ಗೆ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಜುಲೈ 4ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 39/2025, ಕಲಂ: 211(ಎ) ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.