ಬೆಂಗಳೂರು ,ಏಪ್ರಿಲ್ 24 : ನಗರದ ಮಡಿವಾಳದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಮಡಿವಾಳ ಪೊಲೀಸರು ಮೂವರು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಲೇಜು ಆಡಳಿತ ಮಂಡಳಿಯು ಕರ್ತವ್ಯ ಲೋಪ ಎಸಗಿದ ಪರೀಕ್ಷಾ ಮೇಲ್ವಿಚಾರಕರನ್ನು ಸೇವೆಯಿಂದ ಅಮಾನತುಗೊಳಿಸಿದೆ.

ಮಡಿವಾಳದ ಕೃಪನಿಧಿ ಕಾಲೇಜಿನಲ್ಲಿ ಈ ಅಹಿತಕರ ಘಟನೆ ನಡೆದಿದೆ. ಗುರುವಾರ ಸಿಇಟಿ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ತಡೆದ ಪರೀಕ್ಷಾ ಸಿಬ್ಬಂದಿ, ಜನಿವಾರ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅವಕಾಶವಿಲ್ಲ ಎಂದು ಪಟ್ಟು ಹಿಡಿದಿದ್ದರು. “ಜನಿವಾರ ತೆಗೆದು ಪರೀಕ್ಷೆ ಬರೆಯಿರಿ, ಇಲ್ಲವೇ ಮನೆಗೆ ಹೋಗಿ” ಎಂದು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ, ಪರೀಕ್ಷೆಯ ಒತ್ತಡದಲ್ಲಿದ್ದ ವಿದ್ಯಾರ್ಥಿಗಳು ಅನಿವಾರ್ಯವಾಗಿ ತಮ್ಮ ಜನಿವಾರವನ್ನು ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದರು ಎನ್ನಲಾಗಿದೆ.
ಈ ಕುರಿತು ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಮಡಿವಾಳ ಪೊಲೀಸರು, ಪರೀಕ್ಷಾ ಮೇಲ್ವಿಚಾರಕರಾದ ಸರಿತಾ, ಗಿರಿಜಮ್ಮ ಮತ್ತು ಪರೀಕ್ಷಾ ಕೇಂದ್ರದ ಉಸ್ತುವಾರಿ ಸುಧಾಕರ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಬಿಎನ್ಎಸ್ (BNS) ಸೆಕ್ಷನ್ 299 ಹಾಗೂ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ವಿವಿಧ ಸಂಘಟನೆಗಳ ಕಾರ್ಯಕರ್ತರು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಜನಿವಾರ ತೆಗೆಸುವಂತೆ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವೈಯಕ್ತಿಕ ನಿರ್ಧಾರದಿಂದ ಇಂತಹ ಕೃತ್ಯ ಎಸಗಿರುವ ಸಿಬ್ಬಂದಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.