ಸುಳ್ಯ, ಏಪ್ರಿಲ್ 07: ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ್ದ ಆರೋಪಿಯನ್ನು ಸುಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಮೂಲದ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಂದು ಗುರುತಿಸಲಾಗಿದೆ.
ಕಳೆದ ಮಾರ್ಚ್ 30 ರಂದು ಗೂನಡ್ಕದ ಮಸೀದಿ ಆವರಣಕ್ಕೆ ನುಗ್ಗಿದ್ದ ಸಲ್ಮಾನ್, ಅಲ್ಲಿದ್ದ ಕಾಣಿಕೆ ಡಬ್ಬಿಯನ್ನು ಹೊತ್ತೊಯ್ದು ಪರಾರಿಯಾಗಿದ್ದ. ಈ ಕುರಿತು ಮಸೀದಿ ಆಡಳಿತ ಮಂಡಳಿಯು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ದೂರು ಸ್ವೀಕರಿಸಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಸ್ಥಳೀಯ ಮಾಹಿತಿಯ ಆಧಾರದ ಮೇಲೆ ತನಿಖೆ ಆರಂಭಿಸಿದ್ದರು. ಏಪ್ರಿಲ್ 6 ರಂದು ಕೆಮ್ರಾಜೆ ಗ್ರಾಮದ ಎಲಿಮಲೆ ಎಂಬಲ್ಲಿ ಆರೋಪಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಸುಳ್ಯ ಇನ್ಸ್ಪೆಕ್ಟರ್ ನೇತೃತ್ವದ ತಂಡ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದೆ. ಆರೋಪಿಯಿಂದ ಕಳವು ಮಾಡಲಾದ 2,000 ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಇಂದು (ಏಪ್ರಿಲ್ 7) ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆತ ಬೇರೆಡೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
–