ಮಂಗಳೂರು ಎಪ್ರಿಲ್ 1: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಬಂಧಿತ ಆರೋಪಿ. ಈತನಿಂದ ಕಳವು ಮಾಡಲಾಗಿದ್ದ ಕಾಣಿಕೆ ಹುಂಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಳೆದ ಮಾರ್ಚ್ 3ರಂದು ಕೆಂಜಾರಿನ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ್ದ ಕಳ್ಳರು, ಮೂರು ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು 25,000 ರೂ. ನಗದನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಮಂಗಳವಾರ (ಮಾ. 31) ಖಚಿತ ಮಾಹಿತಿಯ ಮೇರೆಗೆ ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಶಬಿಕ್ ಅಹಮ್ಮದ್ ತಮಿಳುನಾಡಿನಿಂದ ರೈಲಿನಲ್ಲಿ ಕರಾವಳಿಗೆ ಬಂದು ಕಳ್ಳತನ ಎಸಗುತ್ತಿದ್ದ. ಕೃತ್ಯ ಎಸಗಿದ ಕೂಡಲೇ ಮರಳಿ ತಮಿಳುನಾಡಿಗೆ ತೆರಳಿ ತಲೆಮರೆಸಿಕೊಳ್ಳುವುದು ಈತನ ಹಳೆಯ ಚಾತುರ್ಯವಾಗಿತ್ತು. ವಿಚಾರಣೆ ವೇಳೆ ಈತ ಫೆಬ್ರವರಿ ಕೊನೆಯ ವಾರದಲ್ಲಿ ಪಣಂಬೂರು ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ‘ಪ್ಯಾಷನ್ ಪ್ರೋ’ ಮೋಟಾರ್ ಸೈಕಲ್ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲೂ ಈತನ ವಿರುದ್ಧ ಕಳ್ಳತನದ ಪ್ರಕರಣ ದಾಖಲಾಗಿದೆ.
ಬಜಪೆ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಅವರ ನೇತೃತ್ವದಲ್ಲಿ ಕ್ರೈಂ ವಿಭಾಗದ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.