Connect with us

    LATEST NEWS

    ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಮಾತ್ರ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ

    ಮಂಗಳೂರು ಸೆಪ್ಟೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.


    ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಕೋವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದ್ದರೂ, ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿಗಳೂ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಮುಂದಿನ ಆದೇಶದವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.

    ಕಟೀಲು ಶ್ರೀ ಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಮುಂದಿನ ಆದೇಶದವರೆಗೆ ಭಕ್ತಾದಿಗಳಿಗೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆಯಲಾಗಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಮಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.


    ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಶನಿವಾರ ಮತ್ತು ಭಾನುವಾರ ಎಲ್ಲಾ ರೀತಿಯ, ಉತ್ಸವ, ಸೇವೆಗಳ, ತೀರ್ಥ, ಪ್ರಸಾದ, ಮುಡಿ ಸೇವೆ ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರಾದಾಯಿಕ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಜಾತ್ರೆಗಳು, ದೇವಾಲಯದ ಉತ್ಸವಗಳು ಹಾಗೂ ಮೆರವಣಿಗೆಗಳನ್ನು ಸಹ ನಿರ್ಬಂಧಿಸಲಾಗಿದೆ.

    ಈ ಆದೇಶವನ್ನು ಉಲ್ಲಂಘಿಸಿದಲ್ಲಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2001ರ ಕಲಂ 51 ರಿಂದ 60ರನ್ವಯ, ಐಪಿಸಿ ಕಲಂ 188ರಂತೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply