KARNATAKA
ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು, ಜುಲೈ 27: ಬಿಜೆಪಿಯ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ. ಇದು ದುರದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವಾಗ ಹತ್ಯೆ ಮಾಡಲಾಗಿದೆ ಇದು ಖಂಡನೀಯ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಲಿ. ಆದರೆ ಹತ್ಯೆ ಮಾಡುವುದು, ರಕ್ತ ಹರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಆ ಭಾಗದ ಜನ ಉದ್ವೇಗಕ್ಕೆ ಒಳಗಾಗಬೇಡಿ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಕೂಡ ಮಾತಾಡಿದ್ದೇನೆ. ಶಾಂತಿ, ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಈ ಮತಾಂಧ ಶಕ್ತಿಗಳು ಒಂದು ರಾಜ್ಯದಲ್ಲಿ ಮಾತ್ರ ಕಾರ್ಯಾಚರಣೆ ಮಾಡುತ್ತಿಲ್ಲ. ಅವರ ಕಾರ್ಯಾಚರಣೆ ಎರಡು ರಾಜ್ಯಗಳಲ್ಲಿ ನಡೆಯುತ್ತಿದೆ. ಗಡಿ ಭಾಗದಲ್ಲಿ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ. ಕೇರಳ ಸರ್ಕಾರದ ಜತೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.