Connect with us

KARNATAKA

CBI ತನಿಖೆ ಅನುಮತಿ ವಾಪಸ್‌ ಪ್ರಶ್ನಿಸಿದ್ದ ಅರ್ಜಿ ವಜಾ – ಸುಪ್ರೀಂ ಕೋರ್ಟ್ ಹಾದಿ ತೋರಿದ ಹೈಕೋರ್ಟ್‌,ಡಿಕೆಶಿ ಸದ್ಯ ನಿರಾಳ..!

ಬೆಂಗಳೂರು :  ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ. ಇದರಿಂದ ಡಿಕೆ ಶಿವಕುಮಾರ್‌ ನಿರಾಳರಾಗಿದ್ದು, ಸಿಬಿಐಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ.

ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್‌ 12ರಂದು ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ಇಂದು ಪ್ರಕಟಿಸಿತು.“ಎಲ್ಲರ ವಾದ ಮತ್ತು ಕಾನೂನಿನ ನಿಬಂಧನೆಗಳನ್ನು ಸೂಕ್ಷ್ಮವಾಗಿ ಆಲಿಸಿ ಮತ್ತು ಪರಿಶೀಲಿಸಿದ ಬಳಿಕ, ಈ ಸಂಘರ್ಷವು ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವೆ ಇದೆ ಎಂದು ನ್ಯಾಯಾಲಯ ಅರಿತುಕೊಂಡಿದೆ. ಸಿಬಿಐ ಕೇಂದ್ರ ಸರ್ಕಾರದ ಅಡಿ ಕಾರ್ಯನಿರ್ವಹಿಸಲಿದೆ. ಇಲ್ಲಿ ದೆಹಲಿ ವಿಶೇಷ ಪೊಲೀಸ್‌ ಸ್ಥಾಪನಾ ಕಾಯಿದೆ ಮತ್ತು ಹಣ ಅಕ್ರಮ ವರ್ಗಾವಣೆ ಕಾಯಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಂವಿಧಾನಿಕ ಅಧಿಕಾರದ ಕುರಿತಾದ ನಿಬಂಧನೆಗಳಿಗೆ ಸಂಬಂಧಿಸಿದ ವಿಚಾರಗಳನ್ನು ಎತ್ತಲಾಗಿದೆ. ಪಶ್ಚಿಮ ಬಂಗಾಳ ವರ್ಸಸ್‌ ಭಾರತ ಸರ್ಕಾರ ಪ್ರಕರಣದ ತೀರ್ಪಿನ ಪ್ರಕಾರ ಹಾಲಿ ಅರ್ಜಿಗಳು ಸಂವಿಧಾನದ 131ನೇ ವಿಧಿಯಡಿ ಬರಲಿವೆ. ಕೇಂದ್ರ ಸರ್ಕಾರವು ಎಲ್ಲಿಯವರೆಗೆ ರಾಜ್ಯವೊಂದರಲ್ಲಿ ಸಿಬಿಐ ಅನ್ನು ಕಾರ್ಯನಿರ್ವಹಣೆಗೆ ಹಚ್ಚಬಹುದು ಎಂಬುದಕ್ಕೆ ಸಂಬಂಧಿಸಿದ ಕಾನೂನಿನ ವಿಚಾರವನ್ನು ಒಳಗೊಂಡಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ. ಇಲ್ಲಿನ ಕಾನೂನಿನ ವಿಚಾರಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸಂಬಂಧಿಸಿರುವುರಿಂದ ಇದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್‌ ನಿರ್ಧರಿಸುವುದು ಸೂಕ್ತವಾಗಿದೆ” ಎಂದು ಹೈಕೋರ್ಟ್‌ ಆದೇಶದಲ್ಲಿ ಹೇಳಿದೆ.“ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಹಾಲಿ ಅರ್ಜಿಗಳು ಅನೂರ್ಜಿತವಾಗಲಿದ್ದು, ಪ್ರಕರಣವು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿರುವ ಸಿಬಿಐ ಮತ್ತು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ. ಇಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಕಾರವನ್ನು ಎಲ್ಲಿಯವರೆಗೆ ವಿಸ್ತರಿಸಬಹುದು ಮತ್ತು ರಾಜ್ಯ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದ ಪ್ರಶ್ನೆಗಳು ಅಡಗಿವೆ. ಹೀಗಾಗಿ, ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್‌ ತನ್ನ ವ್ಯಾಪ್ತಿಯಲ್ಲಿ ನಿರ್ಧರಿಸುವುದು ಸೂಕ್ತವಾಗಿದೆ. ಹೀಗಾಗಿ, ಅರ್ಜಿಗಳು ಅನೂರ್ಜಿತವಾಗಿವೆ ಎಂದು ವಜಾ ಮಾಡಲಾಗಿದೆ. ಅದಾಗ್ಯೂ, ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ” ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *