LATEST NEWS
ಡಿಜಿಪಿಯನ್ನೇ ಹುದ್ದೆಯಿಂದ ತೆಗೆದ ಉತ್ತರ ಪ್ರದೇಶದ ಯೋಗಿ ಸರ್ಕಾರ!
ಲಖನೌ, ಮೇ 12: ಅಸಮರ್ಥತೆ ಮತ್ತು ನಿರ್ಲಕ್ಷ್ಯದ ಕಾರ್ಯನಿರ್ವಹಣೆ ಕಾರಣದಿಂದ ಉತ್ತರ ಪ್ರದೇಶ ಡಿಜಿಪಿ ಮುಕುಲ್ ಗೋಯೆಲ್ ಅವರನ್ನು ಅಮಾನತು ಮಾಡಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಸರ್ಕಾರ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರಿಗೆ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಗೋಯೆಲ್ ಅವರನ್ನು ನಾಗರಿಕ ರಕ್ಷಣಾ ಇಲಾಖೆಯ ಮಹಾನಿರ್ದೇಶಕ(ಡಿಜಿ) ಆಗಿ ನಿಯೋಜಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
1987ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಗೋಯೆಲ್ ಅವರನ್ನು ಕಳೆದ ವರ್ಷ ಜೂನ್‌ನಲ್ಲಿ ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿತ್ತು. ಅದಕ್ಕೂ ಮುನ್ನ ಅವರು ಗಡಿ ಭದ್ರತಾ ಪಡೆಯ ಹೆಚ್ಚುವರಿ ಮಹಾನಿರ್ದೇಶಕರಾಗಿದ್ದರು.
ಮುಜಾಫರನಗರದವರಾದ ಗೋಯೆಲ್ ಅವರು ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ.