ಬೆಳ್ತಂಗಡಿ, ಮಾರ್ಚ್ 12: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಶರತ್ ಎಸ್ (24) ಎಂದು ಗುರುತಿಸಲಾಗಿದೆ.

2022ರ ಮಾರ್ಚ್ 24ರಂದು ರಾತ್ರಿ ನಡೆದ ಮನೆಗಳ್ಳತನ ಪ್ರಕರಣವು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕ್ರ.ಸಂ. 22/2022ರಂತೆ ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆಯ ಕಲಂ 457 ಮತ್ತು 380ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣದಲ್ಲಿ ಆರೋಪಿಯಾಗಿದ್ದ ಶರತ್ ಎಸ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ಶರತ್ ಎಸ್ಗೆ ಕಲಂ 457ರಡಿ 6 ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ ₹500 ದಂಡ, ಮತ್ತು ಕಲಂ 380ರಡಿ 10 ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ ₹500 ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 10 ದಿನಗಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.