ಕುಂದಾಪುರ ಎಪ್ರಿಲ್ 23: ಗುರುವಾರ ಪ್ರಕಟವಾದ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಪ್ರೀತಮ್ ಜಿ ಪೂಜಾರಿ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಕುಂದಾಪುರದ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿಯಾಗಿರುವ ಪ್ರೀತಮ್, ಬಿದ್ದಲಟ್ಟೆಯ ನಿವಾಸಿ ಗಣಪತಿ ಪೂಜಾರಿ ಮತ್ತು ನಾಗರತ್ನಾ ದಂಪತಿಯ ಪುತ್ರ. ತಂದೆ ಗಣಪತಿ ಪೂಜಾರಿ ಖಾಸಗಿ ಬಸ್ನಲ್ಲಿ ಕಂಡಕ್ಟರ್ ಆಗಿ ದುಡಿಯುತ್ತಿದ್ದರೆ, ತಾಯಿ ಗೃಹಿಣಿ. ಆರ್ಥಿಕ ಮುಗ್ಗಟ್ಟಿನ ನಡುವೆಯೂ ಮಗನ ಸಾಧನೆಗೆ ಪೋಷಕರು ಬೆನ್ನೆಲುಬಾಗಿ ನಿಂತಿದ್ದಾರೆ.
ತನ್ನ ಸಾಧನೆ ಬಗ್ಗೆ ಮಾತನಾಡಿದ ಪ್ರೀತಮ್, “ಪ್ರತಿದಿನ ಓದುವ ಹವ್ಯಾಸ ಮತ್ತು ಶಾಲೆಯ ಶಿಕ್ಷಕರ ಮಾರ್ಗದರ್ಶನದಿಂದ ಈ ಯಶಸ್ಸು ಸಾಧ್ಯವಾಗಿದೆ. ಮುಂದೆ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವ್ಯಾಸಂಗ ಮಾಡಿ ಜೆಇಇ ಪರೀಕ್ಷೆ ಎದುರಿಸುವ ಗುರಿ ಹೊಂದಿದ್ದೇನೆ,” ಎಂದು ಹರ್ಷ ವ್ಯಕ್ತಪಡಿಸಿದರು. ಪ್ರೀತಮ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಏಳು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದು, ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.