LATEST NEWS
ವಾರಾಹಿ ಎಡದಂಡೆ ಕಾಮಗಾರಿ ವ್ಯಾಪ್ತಿಯ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
ಉಡುಪಿ, ಡಿಸೆಂಬರ್ 17 : ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗಿರುವ ವಾರಾಹಿ ಎಡದಂಡೆ ಕಾಮಗಾರಿಯಿಂದ ಸ್ಥಳೀಯರಿಗೆ ಸಂಪರ್ಕ ರಸ್ತೆ ಸಮಸ್ಯೆ ಸೇರಿದಂತೆ ಮತ್ತಿತರ ಸಮಸ್ಯೆಗಳ ಬಗ್ಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
ಅವರು ಬಿದ್ಕಲ್‌ಕಟ್ಟೆಯ ಕೆ.ಪಿ.ಎಸ್. ಶಾಲೆಯಲ್ಲಿ ನಡೆದ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಾರಾಹಿ ಎಡದಂಡೆ ಕಾಮಗಾರಿಯ ಕಾರಣ ಗ್ರಾಮದಲ್ಲಿ ಹಲವೆಡೆ ಸಂಪರ್ಕ ರಸ್ತೆಗಳ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ವಾರಾಹಿ ಇಂಜಿನಿಯರ್‌ಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ವಾರಾಹಿಯ ಕಿರಿಯ ಇಂಜಿನಿಯರ್ ಬಳಿ ಈ ಬಗ್ಗೆ ವಿವರ ಕೇಳಿದ ಜಿಲ್ಲಾಧಿಕಾರಿಗಳು, ತಾವು ಇಡೀ ದಿನ ಇದೇ ಗ್ರಾಮದಲ್ಲಿ ವಾಸ್ಯವ್ಯ ಇರಲಿದ್ದು, ಸ್ಥಳಕ್ಕೆ ವಾರಾಹಿಯ ಹಿರಿಯ ಇಂಜಿನಿಯರ್ ಸಂಬಂಧಪಟ್ಟ ದಾಖಲೆಗಳೊಂದಿಗೆ ಕೂಡಲೇ ಹಾಜರಾಗುವಂತೆ ಹಾಗೂ ಈ ಸಮಸ್ಯೆಗಳ ಬಗ್ಗೆ ತಕ್ಷಣದಲ್ಲಿಯೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ವಾರಾಹಿ ಎಡದಂಡೆ ಕಾಮಗಾರಿಗೆ ಭೂಮಿ ನೀಡಿರುವ ಸಾರ್ವಜನಿಕರ ಕಂದಾಯ ದಾಖಲೆಗಳಲ್ಲಿನ ಸಮಸ್ಯೆಗಳ ಬಗ್ಗೆ ಮನವಿ ಆಲಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕುಂದಾಪುರ ಉಪ ವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗೆ
ಸೂಚಿಸಿದರು. ಕಂದಾಯ ದಾಖಲೆಗಳ ಯಾವುದೇ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಸಂಬAಧಪಟ್ಟ ದಾಖಲೆಗಳೊಂದಿಗೆ ಸೋಮವಾರ ತಮ್ಮ ಕಚೇರಿಗೆ ಬಂದು ಸರಿಪಡಿಸಿಕೊಳ್ಳುವಂತೆ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ತಿಳಿಸಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮಗಳಲ್ಲಿ ಗ್ರಾಮ ಒನ್ ಸೆಂಟರ್‌ಗಳನ್ನು ತೆರೆಯಲಾಗಿದ್ದು, ಇದರಿಂದಾಗಿ ತಾಲೂಕು ಮತ್ತು ಜಿಲ್ಲಾ ಕಚೇರಿಯಲ್ಲಿ ದೊರೆಯುವ ವಿವಿಧ ಇಲಾಖೆಗಳ ಹಲವು ದಾಖಲೆ ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರು ಗ್ರಾಮದಲ್ಲಿಯೇ ಪಡೆಯಬಹುದಾಗಿದೆ.
ಆಯುಷ್ಮಾನ್ ಕಾರ್ಡ್ ಯೋಜನೆಯ ಮೂಲಕ ಆರೋಗ್ಯ ಸಮಸ್ಯೆಗಳಿಗೆ ಬಿಪಿಎಲ್ ಕಾರ್ಡ್ಗೆ 5 ಲಕ್ಷ ಮತ್ತು ಎಪಿಲ್ ಗೆ 1.5 ಲಕ್ಷ ರೂ ವರೆಗೆ ನೊಂದಾಯಿತ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಸಾಧ್ಯವಿದ್ದು, ಸಾರ್ವಜನಿಕರು ಇವುಗಳ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸಾರ್ವಜನಿಕರಿಗೆ ವಿವಿಧ ಇಲಾಖೆಯ ಸವಲತ್ತುಗಳನ್ನು ವಿತರಿಸಿದರು.
You must be logged in to post a comment Login