Connect with us

    UDUPI

    ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಂಡು ಬಂದಲ್ಲಿ ಅಧಿಕಾರಿಗಳ ಮೇಲೆ ಕಠಿಣ ಕ್ರಮ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ

    ಉಡುಪಿ, ಆಗಸ್ಟ್ 20: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪ್ರಕರಣಗಳು ಕಂಡು ಬಂದಲ್ಲಿ ಸಂಬAಧಪಟ್ಟ ವ್ಯಾಪ್ತಿಯ ಅಧಿಕಾರಿಗಳೇ ಜವಾಬ್ದಾರರಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದರು.


    ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಬಗ್ಗೆ ಸಮೀಕ್ಷೆ ನಡೆಸಿ, ಯಾವುದೇ ಮ್ಯಾನ್ಯುಯಲ್  ಸ್ಕ್ಯಾವೆಂಜರ್ ಇಲ್ಲವೆಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. ಈ ಸಮೀಕ್ಷೆ ನಂತರವು ಯಾರಾದರೂ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಹಾಗೂ ಸ್ಕ್ಯಾವೆಂಜರ್ ಕೆಲಸವನ್ನು ಮಾಡಿಸುವವರ ವಿರುದ್ಧ ಸಹ ಎಂ.ಎಸ್. ಕಾಯ್ದೆ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

    ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳನ್ನು ಸ್ವಚ್ಛಗೊಳಿಸಿ, ಅದನ್ನು ಸೂಕ್ತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಪಕ್ಕದ ಗ್ರಾಮ ಪಂಚಾಯತ್‌ಗಳಲ್ಲಿಯೂ ಸಹ ಸಕ್ಕಿಂಗ್ ಯಂತ್ರದ ಸೇವೆ ಒದಗಿಸುವಂತೆ ಹಾಗೂ ವಿಲೇವಾರಿ ಅಗತ್ಯವಿರುವ ನಿರ್ವಹಣಾ ಘಟಕಗಳ ಸ್ಥಾಪನೆಯನ್ನು ಆದ್ಯತೆಯ ಮೇಲೆ ಕೈಗೊಳ್ಳುವಂತೆ ಸೂಚನೆ ನೀಡಿದರು.


    ಜಿಲ್ಲೆಯ ಎಲ್ಲಾ ಪೌರ ಕಾರ್ಮಿಕರಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆಯನ್ನು ನಡೆಸುವಂತೆ ಮತ್ತು ಅವರಿಗೆ ಕರ್ತವ್ಯ ನಿರ್ವಹಣೆಗೆ ಅಗತ್ಯವಿರುವ ಉತ್ತಮ ಗುಣಮಟ್ಟದ ಸುರಕ್ಷತಾ ಧರಿಸು ಮತ್ತು ಪರಿಕರಗಳನ್ನು ನೀಡಿ, ಅವರು ಅವುಗಳನ್ನು ಧರಿಸಿಕೊಂಡೇ ಕರ್ತವ್ಯ ನಿರ್ವಹಿಸುವ ಬಗ್ಗೆ ಪರಿಶೀಲನೆ ನಡೆಸಿ ಎಂದರು. ಪೌರ ಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರಿಗೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ, ಅವರಿಂದ ಅರ್ಜಿಗಳನ್ನು ಸ್ವೀಕರಿಸಿ, ಸೌಲಭ್ಯಗಳನ್ನು ಮಂಜೂರು ಮಾಡುವಂತೆ ತಿಳಿಸಿದರು.

    ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಯೋಜನೆಗಳ ಸೌಲಭ್ಯವನ್ನು ಒದಗಿಸುವಂತೆ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ವಿವಿಧೆಡೆ ಆರಂಭಿಸಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕಗಳ ಸೌಲಭ್ಯವನ್ನು ಬಳಸಿಕೊಂಡು ಸಕ್ಕಿಂಗ್ ಯಂತ್ರಗಳ ಮೂಲಕ ಸಂಗ್ರಹಿಸುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಹಾಗೂ ಸಕ್ಕಿಂಗ್ ವಾಹನಗಳ ಸೇವೆ ಪಡೆಯಲು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಮತ್ತು ವಿಳಾಸದ ಬಗ್ಗೆ ಹೆಚ್ಚು ಪ್ರಚಾರ ಪಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ತಿಳಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *