Connect with us

    UDUPI

    ಸವಲತ್ತುಗಳಿಂದ ಆರ್ಥಿಕವಾಗಿ ಸಬಲರಾಗಬೇಕು : ಸಚಿವ ಎಸ್ ಅಂಗಾರ

    ಉಡುಪಿ, ಫೆಬ್ರವರಿ 27 : ಸರಕಾರ ನೀಡುವ ವೈಯಕ್ತಿಕ ಸವಲತ್ತುಗಳನ್ನು ಪಡೆದುಕೊಳ್ಳುವ ನಾಗರೀಕರು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ
    ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.

    ಅವರು ಇಂದು, ನಗರದ ಕಿದಿಯೂರು ಹೋಟೆಲ್‌ನ ಮಾಧವಕೃಷ್ಣ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ವಿವಿಧ ಅಭಿವೃದ್ಧಿ ನಿಗಮಗಳು ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಿಗಮಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಹಾಗೂ ಪೌರಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಸರಕಾರವು ವಿವಿಧ ಇಲಾಖೆಗಳು ಮತ್ತು ನಿಗಮಗಳ ಮೂಲಕ ಹಲವಾರು ಯೋಜನೆಗಳಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಜನತೆಯ ಆರ್ಥಿಕ ಅಭಿವೃದ್ಧಿಗಾಗಿ ವೈಯಕ್ತಿಕವಾಗಿ ಸವಲತ್ತುಗಳನ್ನು ವಿತರಿಸುತ್ತಿದ್ದು, ಸಾರ್ವಜನಿಕರು ಈ ಸವಲತ್ತುಗಳನ್ನು ಪಡೆದು ಸ್ವಾವಲಂಭಿಗಳಾಗಿ ಮತ್ತು ಆರ್ಥಿಕವಾಗಿ ಸಬಲರಾಗಿ ಅಭಿವೃದ್ಧಿ ಹೊಂದಬೇಕು ಎಂದರು.


    ಮೀನುಗಾರಿಕಾ ಇಲಾಖೆಯಲ್ಲಿ ಮೀನುಗಾರರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು, ಅವರನ್ನು ಮಾರುಕಟ್ಟೆ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ, ಸಮುದ್ರದಲ್ಲಿ ಹಿಡಿದ ಮೀನುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಿ, ಹೆಚ್ಚಿನ ಆರ್ಥಿಕ ಲಾಭ ಗಳಿಸಲು ಅನುಕೂಲವಾಗುವಂತೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ತ್ರಿಚಕ್ರ ವಾಹನ ವಿತರಿಸುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ವಾಹನದಲ್ಲಿ ಕೋಲ್ಡ್ ಸ್ಟೋರೆಜ್ ಮತ್ತು ಪ್ಯಾಕಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವ ಮೂಲಕ ಗ್ರಾಹಕರಿಗೆ ತಾಜಾ ಮೀನು ಮಾರಾಟ ಮಾಡಲು ಸಾಧ್ಯವಾಗಲಿದೆ ಎಂದರು.

    ಸರಕಾರದಿಂದ ಸವಲತ್ತುಗಳನ್ನು ಪಡೆದ ಸಾರ್ವಜನಿಕರು ಅದರ ಸದುಪಯೋಗಪಡಿಸಿಕೊಂಡು ಇತರರಿಗೆ ಪ್ರೇರಣೆಯಾಗಬೇಕು ಹಾಗೂ ಸವಲತ್ತುಗಳನ್ನು ಪಡೆದವರೇ ಮತ್ತೆ ಮತ್ತೆ ಪಡೆಯದೇ, ಎಲ್ಲರಿಗೂ ಸಮಾನವಾಗಿ ದೊರಕಿಸಲು ಪ್ರಯತ್ನಿಸಬೇಕು ಎಂದರು.

    ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಯೋಜನೆಗಳನ್ನು ಪಡೆದುಕೊಂಡ ಫಲಾನುಭವಿಗಳು ಅದರ ಸದುಪಯೋಗ ಪಡಿಸಿಕೊಳ್ಳಬೇಕು. ಸ್ವಂತ ದುಡಿಮೆಯಲ್ಲಿ ಬದುಕಲು ಇಚ್ಛಿಸುವ ಪ.ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಿಸುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ 500 ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಈ ಮೂಲಕ ಅವರು ತರಕಾರಿ, ಮೀನು, ಬಟ್ಟೆ ಹಾಗೂ ಮುಂತಾದ ವ್ಯಾಪಾರ ಮಾಡಲು ಸರಕಾರ ಉತ್ತೇಜನ ನೀಡಲಾಗುತ್ತದೆ ಎಂದರು.

    ರಾಜ್ಯದಲ್ಲಿ ಹೊಲಿಗೆ ತರಬೇತಿ ಪಡೆದಿರುವ ಹಿಂದುಳಿದ ವರ್ಗದ ಮಹಿಳೆಯರಿಗೆ ಶೀಘ್ರದಲ್ಲೇ 9000 ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ರಾಜ್ಯದಲ್ಲಿ ಈಗಾಗಲೇ 12000 ಪೌರಕಾರ್ಮಿಕರ ಹುದ್ದೆಯನ್ನು ಖಾಯಂ ಮಾಡಲಾಗಿದೆ. ವಸತಿ
    ಶಾಲೆಗಳಲ್ಲಿ ಉಚಿತ ಶಿಕ್ಷಣ, ಬೋರ್‌ವೆಲ್ ಕೊರೆಯುವ ಮೊತ್ತವನ್ನು ನೇರವಾಗಿ ಫಲಾನುಭವಿಯ ಖಾತೆಗೆ ಜಮೆ ಮಾಡಲಾಗುತ್ತಿದೆ. ಪ.ಜಾತಿ, ಪಂಗಡದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆ ಎಂದರು.

     

    Share Information
    Advertisement
    Click to comment

    Leave a Reply

    Your email address will not be published. Required fields are marked *