Connect with us

LATEST NEWS

ಸರ್ಕಾರದ ಯೋಜನೆಗಳನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು: ಉಡುಪಿ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು

ಉಡುಪಿ, ಜುಲೈ 26 : ಜನ ಸಾಮಾನ್ಯರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಸೇರಿದಂತೆ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸಿ ಜನೋಪಯೋಗಿಯನ್ನಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು ಹೇಳಿದರು.  ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಹೆಚ್ಚಿನ ಮಳೆಯಾಗುತ್ತಿದ್ದು, ನೆರೆಯಿಂದಾಗಿ ಇದುವರೆಗೆ 9 ಮಾನವ ಜೀವಹಾನಿಗಳು ಉಂಟಾಗಿದೆ. ಮುಂದಿನ ದಿನಗಳಲ್ಲಿಯೂ ಸಹ ಮಳೆ ಅಧಿಕವಾಗಿ ಸುರಿದು ಮತ್ತಷ್ಟು ಅವಘಢಗಳು ಉಂಟಾಗುವ ಸಾಧ್ಯತೆಗಳಿವೆ. ಹೆಚ್ಚಿನ ಹಾನಿಯನ್ನು ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮಾನವ ಜೀವಹಾನಿಯಾಗದಂತೆ ಎಚ್ಚರವಹಿಸಬೇಕು ಎಂದರು.

ಈಗಾಗಲೇ ಜಿಲ್ಲೆಗೆ ಪ್ರಕೃತಿ ವಿಕೋಪ ತುರ್ತು ನಿರ್ವಹಣೆಗಾಗಿ ಎಸ್.ಡಿ.ಅರ್.ಎಫ್ ನ 11 ಜನರ ತಂಡವನ್ನು ನಿಯೋಜಿಸಲಾಗಿದೆ. ಹಾಗೂ 300 ಕ್ಕೂ ಹೆಚ್ಚು ಸ್ವಯಂ ಸೇವಕರಿಗೆ ಆಪದ ಮಿತ್ರ ಯೋಜನೆಯಡಿ ತರಬೇತಿ ನೀಡಲಾಗಿದ್ದು, ಇವರುಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ತೊಂದರೆಯಾದಾಗ ವಿಕೋಪ ಪರಿಹಾರ ಕಾರ್ಯಗಳನ್ನು ಶೀಘ್ರದಲ್ಲಿ ಕೈಗೊಳ್ಳಬೇಕು ಎಂದರು.

ಗೃಹಲಕ್ಷಿö್ಮ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 34,561 ನೊಂದಣಿ ಆಗಿದ್ದು, ನೊಂದಣಿ ಕಾರ್ಯಗಳು ಯಾವುದೇ ರೀತಿಯ ಗೊಂದಲಗಳಾಗದಂತೆ, ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಪ್ರತಿದಿನ ನೊಂದಣಿ ಕೇಂದ್ರಗಳಿಗೆ ನೀಡಿರುವ ಗುರಿಯನ್ನು ತಲುಪಬೇಕು. ಪ್ರಜಾಪ್ರತಿನಿಧಿಗಳು ಸಹ ನೊಂದಣಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ನೊಂದಣಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕಳೆದ ತಿಂಗಳು ಶಕ್ತಿ ಯೋಜನೆಯಡಿ 29,790 ಮಹಿಳೆಯರು ಪ್ರಯಾಣಿಸಿದ್ದು, 11,11,533 ವೆಚ್ಚವನ್ನು ಭರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2,33,291 ಗ್ರಾಹಕರ ಅರ್ಜಿ ನೊಂದಾಯಿಸಲಾಗಿದೆ ಎಂದರು.

ಕೊರಗ ಸಮುದಾಯದ 350 ಕ್ಕೂ ಹೆಚ್ಚು ಜನರಿಗೆ ಬಿಪಿಎಲ್ ಕಾರ್ಡ್ ದೊರೆತಿರುವುದಿಲ್ಲ. ಪ್ರಸ್ತುತ ಹೊಸ ಪಡಿತರ ಚೀಟಿಗಳನ್ನು ನೀಡುವುದನ್ನು ನಿಲ್ಲಿಸಲಾಗಿದೆ. ಇವರುಗಳಿಗೆ ಆದ್ಯತೆಯ ಮೇಲೆ ನೀಡಲು ಸರಕಾರದಿಂದ ವಿಶೇಷ ಅನುಮತಿ ಪಡೆದು ಪಡಿತರ ಚೀಟಿಗಳನ್ನು ವಿತರಣೆ ಮಾಡಬೇಕೆಂದು ಸೂಚನೆ ನೀಡಿದರು. ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವ ಕಡೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಈಗಾಗಲೇ ಸರಕಾರದ ಹಂತದಲ್ಲಿ ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, 250 ಕ್ಕೂ ಹೆಚ್ಚಿನ ಶಿಕ್ಷಕರು ಆಗಮಿಸಿದ್ದು, ಅವರುಗಳನ್ನು ಜಿಲ್ಲೆಗೆ ಅಗತ್ಯವಿರುವ ಕಡೆ ನಿಯೋಜಿಸಬೇಕೆಂದು ಸೂಚನೆ ನೀಡಿದರು.


ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ವೈದ್ಯರುಗಳು ಹಾಗೂ ಅರೋಗ್ಯ ಸಿಬ್ಬಂದಿಗಳು ಮುಂದಾಗಬೇಕು. ಆರೋಗ್ಯ ಇಲಾಖೆಯಲ್ಲಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಸರಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದರು. ಶಾಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆಗಳು ನಡೆಸಿದಾಗ ಮಕ್ಕಳಿಗೆ ಉನ್ನತ ಚಿಕಿತ್ಸೆಗೆ ಅವಶ್ಯವಿದ್ದಲ್ಲಿ ಅವರುಗಳಿಗೆ ಜಿಲ್ಲಾ ಆಸ್ಪತ್ರೆ ಮತ್ತು ಉನ್ನತ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಎಂಡೋಸಲ್ಫಾನ್ ಪೀಡಿತ ಸಂತ್ರಸ್ಥರಿಗೆ ಆರೋಗ್ಯ ಸುಧಾರಣೇ ಹಾಗೂ ಪುರ್ನವಸತಿ ಕಾರ್ಯಕ್ರಮಗಳ ಅನುಷ್ಠಾನಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

 

ಗ್ರಾಮೀಣ ಭಾಗದ ಪ್ರತಿ ಗ್ರಾಮಗಳ ಮನೆಗಳಿಗೂ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ನಳ ಸಂಪರ್ಕವನ್ನು ಕಲ್ಪಿಸಬೇಕು. ಈಗಾಗಲೇ ಮೊದಲನೇ ಹಾಗೂ ಎರಡನೇ ಹಂತದ ಕಾಮಗಾರಿಗಳು ಪೂರ್ಣಗೊಂಡಿವೆ. ಮೂರನೇ ಹಂತದ ಕಾಮಗಾರಿ ಕೈಗೊಳ್ಳುವಾಗ ಯಾವುದೇ ಮನೆಗಳು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು ಎಂದರು. ನಗರ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸುವ ಅಮೃತ್ ಯೋಜನೆಯ ಕಾಮಗಾರಿಯನ್ನು ಮುಂದಿನ ವರ್ಷದ ಸೆಪ್ಟೆಂಬರ್ ಪೂರ್ಣಗೊಳಿಸಬೇಕು ಎಂದರು. ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಪರಿಹಾರ ಕಾರ್ಯಗಳನ್ನು ಆಗಿಂದಾಗ್ಗೆ ಕೈಗೊಳ್ಳಬೇಕು. ಮರು ಭಿತ್ತನೆಗೆ ಅವಶ್ಯವಿರುವ ಭಿತ್ತನೆ ಬೀಜಗಳನ್ನು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಬೆಳೆ ವಿಮೆ ವ್ಯಾಪ್ತಿಗೆ ಎಲ್ಲಾ ಬೆಳೆಗಳನ್ನು ತರಲು ಮುಂದಾಗಬೇಕು. ಪ್ರಧಾನಮಂತ್ರಿ ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯೋಜನೆ ಬದ್ಧಗೊಳಿಸುವಿಕೆಯ ಪ್ರಗತಿಯು ನಿಗಧಿತ ಗುರಿಯನ್ನು ಸಾಧಿಸಬೇಕು ಎಂದರು.
ಸರ್ಕಾರದ ಹಂತದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳ ಅನುದಾನಗಳು ಬಿಡುಗಡೆಯಾಗದೇ ಇದ್ದಲ್ಲಿ ಅಂತಹವುಗಳನ್ನು ನಮ್ಮ ಗಮನಕ್ಕೆ ತಂದಲ್ಲಿ ಅವುಗಳನ್ನು ಬಿಡುಗಡೆಗೊಳಿಸಲು ಹಾಗೂ ಸರಕಾರದ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯವಿರುವ ಸಿಬ್ಬಂದಿ ಕೊರತೆಯನ್ನು ಸರಿತೂಗಿಸಲು ಪ್ರಯತ್ನಿಸಲಾಗುವುದು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *