Connect with us

UDUPI

ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಸ್ಪಂದಿಸಿ: ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ನವೆಂಬರ್ 21 : ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಿ, ಅವರ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ಬೈಂದೂರು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸಾರ್ವಜನಿಕರ ಸಣ್ಣಪುಟ್ಟ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಹರಿಸಬೇಕೆಂಬ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜನರ ದೈನಂದಿನ ಸಾಮಾನ್ಯ ಸಮಸ್ಯೆಗಳನ್ನು ಅಧಿಕಾರಿಗಳ ಹಾಗೂ ದೂರುದಾರರ ಸಮ್ಮುಖದಲ್ಲಿ ಇತ್ಯರ್ಥಗೊಳಿಸಲು ನಿಯಮಾನುಸಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.


ದೊಡ್ಡ ಮಟ್ಟದ ಕಾಮಗಾರಿ ಹಾಗೂ ಇನ್ನಿತರ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಲು ಸಾಧ್ಯವಿಲ್ಲದಿರುವುದರಿಂದ ಅಂತಹವುಗಳನ್ನು ಸರಕಾರದ ಮಟ್ಟದಲ್ಲಿ ಬಗೆಹರಿಸಲು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಲಾಗುವುದು. ಇದಕ್ಕಾಗಿ ಪೋರ್ಟಲ್ ಅನ್ನು ತೆರೆಯಲಾಗಿದ್ದು, ಸಾರ್ವಜನಿಕರ ಮನವಿಗಳನ್ನು ಅದರಲ್ಲಿ ದಾಖಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರವನ್ನು ಅದರಲ್ಲಿಯೇ ಅಳವಡಿಸಲಾಗುವುದು ಎಂದರು. ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಅರ್ಜಿಗಳಿಗೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ, ಜನರ ಬಳಿಗೆ ಅಧಿಕಾರಿಗಳು, ಜನರ ಬಳಿಗೆ ಅಧಿಕಾರ ಎಂಬ ಕಲ್ಪನೆಯೊಂದಿಗೆ ಸಮಸ್ಯೆಗಳನ್ನು ಹೊತ್ತು ತರುವ ಸಾರ್ವಜನಿಕರನ್ನು ಅಧಿಕಾರಿಗಳ ಬಳಿ ಹಾಗೂ ಕಚೇರಿಗಳಿಗೆ ಅಲೆದಾಡಿಸದೇ ಅವರ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ದೊರೆಯುವುದರೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ತಿಳಿಸಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಇಂದು 171 ಅರ್ಜಿಗಳು ಬಂದಿದ್ದು, ಹೆಚ್ಚಾಗಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಭೂ ದಾಖಲೆಗಳ ಇಲಾಖೆ, ಮೆಸ್ಕಾಂ, ಅರಣ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಅಲ್ಪ ಅರ್ಜಿಗಳು ಬಂದಿದ್ದವು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್, ತಾಲೂಕು ತಹಶೀಲ್ದಾರ್ ಪ್ರದೀಪ್ ಆರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share Information
Advertisement
Click to comment

You must be logged in to post a comment Login

Leave a Reply