LATEST NEWS
ಶೋಭಾ ಕರಂದ್ಲಾಜೆ ಲೋಕಸಭಾ ಸ್ಥಾನ ಬಿಟ್ಟುಕೊಡಲಿ – ಮೀನುಗಾರರ ಮುಖಂಡರ ನಿಯೋಗ ಒತ್ತಾಯ
ಉಡುಪಿ ಜನವರಿ 27 : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಟಿಕೆಟ್ ಗಾಗಿ ಲಾಭಿಗಳು ಪ್ರಾರಂಭವಾಗಿದೆ. ಈ ನಡುವೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ತಾನೇ ಅಭ್ಯರ್ಥಿ ಎಂದು ಹಾಲಿ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮೋದ್ ಮಧ್ವರಾಜ್ ಅವರಿಗೆ ಸಂಕಷ್ಟ ತಂದಿದೆ. ಈ ನಡುವೆ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೀನುಗಾರರ ಸಮುದಾಯ ಇದುವರೆಗೂ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ರಾಜಕೀಯವಾಗಿ ಬೆಂಬಲ ನೀಡುತ್ತಾ ಬಂದಿದೆ. ಇದಕ್ಕೆ ಪ್ರತಿಯಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಕ್ಷೇತ್ರ ತ್ಯಾಗ ಮಾಡಬೇಕು ಎಂದು ಮೀನುಗಾರರ ಮುಖಂಡರ ನಿಯೋಗ ಒತ್ತಾಯಿಸಿದೆ.
ಶುಕ್ರವಾರ ಅಂಬಲಪಾಡಿಯ ಕಾರ್ತಿಕ್ ಎಸ್ಟೇಟ್ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ.ಸುವರ್ಣ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರ ಬದಲಾಗಿ ಮೊಗವೀರ ಸಮುದಾಯದ ಮುಖಂಡರಾದ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು. ಪ್ರಮೋದ್ ಮಧ್ವರಾಜ್ ಮೀನುಗಾರ ಸಮುದಾಯಕ್ಕೆ ಸೇರಿದವರಾಗಿದ್ದು ಕಡಲ ಮಕ್ಕಳ ಕಷ್ಟಗಳ ಅರಿವಿದೆ. ಮೀನುಗಾರರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಬಂದಿದ್ದಾರೆ. 6 ವರ್ಷ ರಾಷ್ಟ್ರೀಯ ಮೀನುಗಾರರ ವೇದಿಕೆ ಕಾರ್ಯದರ್ಶಿಯಾಗಿ, 12 ವರ್ಷ ಅಖಿಲ ಕರ್ನಾಟಕ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ, 12 ವರ್ಷ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ ದುಡಿದಿದ್ದಾರೆ.
ಎರಡು ಅವಧಿಗೆ ಶಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 2018ರಲ್ಲಿ ಖಾಸಗಿ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ನಂಬರ್ 1 ಶಾಸಕ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ರಾಜಕೀಯ ಹಿನ್ನೆಲೆ, ಶುದ್ಧ ಕಳಂಕ ರಹಿತ ವ್ಯಕ್ತಿತ್ವ ಹಾಗೂ ಪ್ರಾಮಾಣಿಕ ರಾಜಕಾರಣಕ್ಕೆ ಹೆಸರಾಗಿರುವ ಪ್ರಮೋದ್ ಮಧ್ವರಾಜ್ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.